ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಯಶಸ್ವಿಯಾಗಿ ಗಡಿಪಾರು (Deport) ಮಾಡಲಾಗಿದೆ. ನಗರದ 10 ಪ್ರತ್ಯೇಕ ಪೊಲೀಸ್ ಠಾಣೆಗಳಿಂದ ಬಂಧಿಸಲ್ಪಟ್ಟಿದ್ದ ಈ ಪ್ರಜೆಗಳನ್ನು 20 ಮಂದಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾಗೆ ಕಳುಹಿಸಿಕೊಡಲಾಗಿದೆ. ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಿಂದ ಈ ತಂಡವನ್ನು ಪಶ್ಚಿಮ ಬಂಗಾಳದ ಮಾಲ್ಡಾ ರೈಲ್ವೆ ನಿಲ್ದಾಣಕ್ಕೆ ರೈಲಿನಲ್ಲಿ ಕರೆದೊಯ್ಯಲಾಗುತ್ತಿದೆ.
ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ (IPS) ಅವರು ನೀಡಿರುವ ಮಾಹಿತಿಯ ಪ್ರಕಾರ, “ಗಡಿಪಾರು ಮಾಡಲಾದ ಈ 31 ಬಾಂಗ್ಲಾ ಪ್ರಜೆಗಳನ್ನು ಮಂಗಳವಾರ ಸಂಜೆ 5:00 ಗಂಟೆಯ ಹೊತ್ತಿಗೆ ಪಶ್ಚಿಮ ಬಂಗಾಳದ ಮಾಲ್ಡಾ ತಲುಪಿಸಲಾಗುವುದು. ಅಲ್ಲಿ ಗಡಿ ಭದ್ರತಾ ಪಡೆ (BSF) ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕಾನೂನು ಗಡಿಪಾರು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ.” ಎಂದು ಹೇಳಿದ್ದರು.
ಇದನ್ನೂ ಓದಿ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ನಾಯಕರಿಗೆ ‘ಜನತಾ ನ್ಯಾಯಾಲಯ’ದ ಸವಾಲು
ಈ ನಡುವೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ (IPS) ಅವರು ಮಾತನಾಡಿ “ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಬಗ್ಗೆ ಸಾರ್ವಜನಿಕರ ಬಳಿ ಮಾಹಿತಿ ಇದ್ದರೆ ತಕ್ಷಣ ಪೊಲೀಸರಿಗೆ ನೀಡಿ. ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಕಾನೂನಿನ ಚೌಕಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ.” ಎಂದು ಹೇಳಿದರು. ಬೆಂಗಳೂರಿನಾದ್ಯಂತ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಆರಂಭಿಸಲಾಗಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯು ನಿರಂತರವಾಗಿ ನಡೆಯಲಿದ್ದು, ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

