ಆನೇಕಲ್: ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ತನ್ನ ಪ್ರೇಯಸಿ ವಾಸವಿದ್ದ ಪಿಜಿ (PG) ಮುಂಭಾಗದಲ್ಲೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲೂಕಿನಲ್ಲಿ ಶನಿವಾರ (ಜೂನ್ 20) ನಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಯುವಕನನ್ನು ಚಿದಂಬರ ಮಲ್ಲಪ್ಪ ಮರಮ್ಮಣ್ಣನವರ ಎಂದು ಗುರುತಿಸಲಾಗಿದ್ದು, ಸದ್ಯ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಚಿದಂಬರ ಕಳೆದ ಕೆಲವು ವರ್ಷಗಳಿಂದ ಯುವತಿಯೊಬ್ಬಳನ್ನು ತೀವ್ರವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯಗಳು ತಲೆದೋರಿದ್ದವು. ಇದರಿಂದ ಬೇಸತ್ತಿದ್ದ ಯುವತಿ, ಚಿದಂಬರನೊಂದಿಗಿನ ಪ್ರೇಮ ಸಂಬಂಧವನ್ನು ಮುರಿದುಕೊಂಡು ದೂರವಾಗಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ
ಯುವತಿಯ ನಿರ್ಧಾರದಿಂದ ತೀವ್ರ ಬೇಸರಗೊಂಡಿದ್ದ ಚಿದಂಬರ, ಆಕೆಯನ್ನು ಮನವೊಲಿಸಲು ಹಲವು ಬಾರಿ ಪ್ರಯತ್ನ ನಡೆಸಿದ್ದನು. ಇದೇ ವಿಚಾರವಾಗಿ ಇಂದು ಯುವತಿ ವಾಸವಿದ್ದ ಪಿಜಿ ಬಳಿಗೆ ತೆರಳಿದ್ದ ಚಿದಂಬರ, ಸಂಬಂಧವನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ತನ್ನ ಬಳಿಯೇ ಇದ್ದ ಚಾಕುವನ್ನು ತೆಗೆದ ಚಿದಂಬರ, ಪ್ರೇಯಸಿಯ ಕಣ್ಣೆದುರೇ ತನ್ನ ಹೊಟ್ಟೆಗೆ ಬಲವಾಗಿ ಇರಿದುಕೊಂಡಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದ ಯುವಕನನ್ನು ತಕ್ಷಣವೇ ಸ್ಥಳೀಯರ ನೆರವುದೊಂದಿಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಸೂರ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


