ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಕೇಳಿಬಂದಿದ್ದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್ (B-Report) ಪ್ರಶ್ನಿಸಿ ದೂರುದಾರರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಮೂಲಕ ಈಶ್ವರಪ್ಪ ಕುಟುಂಬಕ್ಕೆ ಕಾನೂನು ಸಂಕಷ್ಟ ಮತ್ತೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ಶಿವಮೊಗ್ಗ ಮೂಲದ ಪ್ರಭಾವಿ ವಕೀಲರಾದ ಬಿ. ವಿನೋದ್ ಅವರು ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಕಾಂತೇಶ್ ಪತ್ನಿ ಶಾಲಿನಿ ವಿರುದ್ಧ ತಮ್ಮ ಆದಾಯದ ಮೂಲಗಳಿಗಿಂತಲೂ ಅಧಿಕ ಪ್ರಮಾಣದಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುದೀರ್ಘ ತನಿಖೆ ನಡೆಸಿದ್ದರು.

ಆದರೆ, ತನಿಖೆಯ ಅಂತ್ಯದಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಉಲ್ಲೇಖಿಸಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ (ಪ್ರಕರಣ ಮುಕ್ತಾಯ ವರದಿ) ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರ ಈ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಕೀಲ ಬಿ. ವಿನೋದ್, ತನಿಖಾಧಿಕಾರಿಗಳು ತರಾತುರಿಯಲ್ಲಿ ವರದಿ ನೀಡಿದ್ದಾರೆ ಎಂದು ಆರೋಪಿಸಿ ‘ಬಿ’ ರಿಪೋರ್ಟ್ ಅನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದಲ್ಲಿ ಈ ಕುರಿತು ಪ್ರತಿಭಟನಾ ಅರ್ಜಿ (Protest Petition) ಸಲ್ಲಿಸುವ ಮೂಲಕ ಕಾನೂನು ಹೋರಾಟವನ್ನು ಮುಂದುವರಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

