ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅರ್ಜುನ್ ಸಿಂಗ್

uniform-civil-code-west-bengal-expert-committee-announcement

ಕೊಲ್ಕತ್ತಾ: ಏಕರೂಪ ನಾಗರಿಕ ಸಂಹಿತೆ (Uniform Civil Code – UCC) ಕೇವಲ ಪಶ್ಚಿಮ ಬಂಗಾಳದಲ್ಲಷ್ಟೇ ಅಲ್ಲ, ದೇಶಾದ್ಯಂತ ಜಾರಿಗೆ ಬರಲಿದೆ ಎಂದು ಪಶ್ಚಿಮ ಬಂಗಾಳ ಸಚಿವ ಅರ್ಜುನ್ ಸಿಂಗ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುಸಿಸಿ ಪಶ್ಚಿಮ ಬಂಗಾಳಕ್ಕೆ ಮಾತ್ರ ಸೀಮಿತವಾಗುವುದಿಲ್ಲ. ಇದು ದೇಶದಾದ್ಯಂತ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರ ಯುಸಿಸಿ ಕರಡು ಮಸೂದೆಯನ್ನು ಪರಿಶೀಲಿಸಿ ಅಂತಿಮಗೊಳಿಸಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಒಂಬತ್ತು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿರುವ ಬೆನ್ನಲ್ಲೇ ಈ ಹೇಳಿಕೆ ಬಂದಿದೆ. ಸರ್ಕಾರವು ಆಗಸ್ಟ್‌ನಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮಂಡಿಸುವ ಯೋಜನೆ ಹೊಂದಿದೆ.

ಸರ್ಕಾರದ ಮಾಹಿತಿ ಪ್ರಕಾರ, ಪ್ರಸ್ತಾವಿತ ಯುಸಿಸಿಯಲ್ಲಿ ಸ್ಥಳೀಯ ಆದಿವಾಸಿ ಸಮುದಾಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಸಮಿತಿಯಲ್ಲಿ ನಿವೃತ್ತ ನ್ಯಾಯಮೂರ್ತಿಗಳು, ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಸಾಮಾಜಿಕ ಕ್ಷೇತ್ರದ ಪ್ರತಿನಿಧಿಗಳು ಸದಸ್ಯರಾಗಿದ್ದು, ಕರಡು ಮಸೂದೆಯ ವಿವಿಧ ಅಂಶಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಲಿದ್ದಾರೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಯಲ್ಲಿ ಮಾತನಾಡಿ, ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಆಗಸ್ಟ್ ಅಧಿವೇಶನದಲ್ಲಿ ಯುಸಿಸಿ ಕರಡು ಮಸೂದೆಯನ್ನು ಮಂಡಿಸಲಾಗುವುದು ಎಂದು ತಿಳಿಸಿದ್ದರು.

ಇದನ್ನೂ ಓದಿ: ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ: ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದ ಲಾರಿಗಳ ಬಿಡುಗಡೆಗೆ ಸಿಎಂ ಫಡ್ನವೀಸ್ ಒಪ್ಪಿಗೆ

ಇದೇ ವೇಳೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ED) ಸ್ಥಗಿತಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಅರ್ಜುನ್ ಸಿಂಗ್, “ಮುಂದಿನ ದಿನಗಳಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ವಿದೇಶದಲ್ಲಿರುವ ಬ್ಯಾಂಕ್ ಖಾತೆಗಳನ್ನೂ ದೇಶಕ್ಕೆ ತರುವ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚೆಗೆ, ಹಣಕಾಸು ಅಕ್ರಮ, ಅಕ್ರಮ ಹಣ ಸಂಗ್ರಹ ಹಾಗೂ ಅನುಮಾನಾಸ್ಪದ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಟಿಎಂಸಿಯ ಮೂರು ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು 440.42 ಕೋಟಿ ಮೊತ್ತವನ್ನು ಇಡಿ ಸ್ಥಗಿತಗೊಳಿಸಿತ್ತು.

ಆದರೆ, ಈ ಆರೋಪಗಳನ್ನು ತೃಣಮೂಲ ಕಾಂಗ್ರೆಸ್ ಸಂಪೂರ್ಣವಾಗಿ ತಳ್ಳಿ ಹಾಕಿದ್ದು, ತಮ್ಮ ಎಲ್ಲಾ ಬ್ಯಾಂಕ್ ಖಾತೆಗಳ ವಿವರಗಳನ್ನು ಈಗಾಗಲೇ ಭಾರತ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲಾಗಿದೆ ಎಂದು ಹೇಳಿದೆ. ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಕ್ರಮ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಕಾನೂನುಬಾಹಿರ ಎಂದು ಟಿಎಂಸಿ ಆರೋಪಿಸಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *