ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ

ಬಂಟ್ವಾಳ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶುಕ್ರವಾರ ಸಂಜೆ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಆರೋಗ್ಯ ಸೇವೆಗಳು, ಮೂಲಸೌಕರ್ಯಗಳು ಹಾಗೂ ಆಡಳಿತಾತ್ಮಕ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದ್ದಾರೆ.

ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದ ರೋಗಿಗಳೊಂದಿಗೆ ಖುದ್ದಾಗಿ ಮಾತುಕತೆ ನಡೆಸಿದ ಸಚಿವರು, ಆಸ್ಪತ್ರೆಯಲ್ಲಿ ತಮಗೆ ದೊರೆಯುತ್ತಿರುವ ಚಿಕಿತ್ಸಾ ಸೇವೆಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಆಸ್ಪತ್ರೆಯ ಒಟ್ಟಾರೆ ಕಾರ್ಯನಿರ್ವಹಣೆಯ ಕುರಿತು ವಿವರವಾದ ವರದಿ ಪಡೆದುಕೊಂಡರು.

ದೈನಂದಿನ ರೋಗಿಗಳ ಸಂಖ್ಯೆ, ಅಗತ್ಯ ಔಷಧಗಳ ಲಭ್ಯತೆ, ವಿವಿಧ ಚಿಕಿತ್ಸಾ ಸೌಲಭ್ಯಗಳು ಹಾಗೂ ವೈದ್ಯರ ಹಾಜರಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ವೈದ್ಯರ ಹಾಜರಾತಿ ಪುಸ್ತಕವನ್ನೂ ಸಹ ಪರಿಶೀಲಿಸಿದರು.

“ಯಾವುದೇ ಕಾರಣಕ್ಕೂ ಬಡ ರೋಗಿಗಳಿಗೆ ಚಿಕಿತ್ಸೆ ದೊರೆಯದೆ ಸಮಸ್ಯೆ ಉಂಟಾಗಬಾರದು. ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಇದೆ ಎಂಬ ದೂರುಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು” ಎಂದು ಸಚಿವರು ಎಚ್ಚರಿಕೆ ನೀಡಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, “ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯಗಳಿದ್ದರೂ ನಿತ್ಯ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿರಲು ಕಾರಣವೇನು? ಇಲ್ಲಿನ ಚಿಕಿತ್ಸಾ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರಲ್ಲಿ ಸಮರ್ಪಕ ಅರಿವು ಮೂಡಿಸಲು ಯಾಕೆ ಪ್ರಯತ್ನಿಸುತ್ತಿಲ್ಲ?” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಪರಿಣಾಮಕಾರಿಯಾಗಿ ಮಾಹಿತಿ ತಲುಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: ಬಂಟ್ವಾಳದಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕೆಂಪುಕಲ್ಲು ಲಾರಿ; ಓರ್ವ ಕಾರ್ಮಿಕ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

‘ಬಂಟ್ವಾಳ ಆಸ್ಪತ್ರೆ ಇನ್ನಷ್ಟು ಜನಸ್ನೇಹಿಯಾಗಲಿ’:

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, “ಬಂಟ್ವಾಳ ತಾಲೂಕು ಆಸ್ಪತ್ರೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ಅಭಿವೃದ್ಧಿಪಡಿಸುವ ಕುರಿತು ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಲಾಗಿದೆ. ಎಲ್ಲರೂ ತಂಡದ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ” ಎಂದರು.

ಸದ್ಯ ಆಸ್ಪತ್ರೆಯಲ್ಲಿ 12 ವೈದ್ಯರು, 27 ನರ್ಸ್‌ಗಳು ಹಾಗೂ 25 ಡಿ-ಗ್ರೂಪ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಯಾಲಿಸಿಸ್ ಕೇಂದ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಿಂಗಳಿಗೆ 50 ರಿಂದ 60 ಆರ್ಥೋಪೆಡಿಕ್ ಶಸ್ತ್ರಚಿಕಿತ್ಸೆಗಳು ಇಲ್ಲಿ ನಡೆಯುತ್ತಿವೆ.

ಬಂಟ್ವಾಳ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದ ಸಚಿವರು, ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಭೇಟಿ ನೀಡಿ ಪ್ರಗತಿ ಪರಿಶೀಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ಸೇರಿದಂತೆ ಹಲವು ಪ್ರಮುಖರು ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *