ದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ (NEET) ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಪ್ರತಿಭಟನಾಕಾರರು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ, ಶಿಕ್ಷಣ ಸಚಿವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಂಸತ್ ಭವನದ ಸಂಕೀರ್ಣದಲ್ಲಿರುವ ಗೃಹ ಸಚಿವರ ಕಚೇರಿಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಸಂಸತ್ತಿನ ಹೊರಗೆ ತೀವ್ರ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಈ ಇಬ್ಬರು ನಾಯಕರ ಭೇಟಿ ಭಾರೀ ಕುತೂಹಲ ಮೂಡಿಸಿದೆ. ಆದರೆ, ಈ ಸಭೆಯಲ್ಲಿ ಯಾವ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂಬ ಅಧಿಕೃತ ಮಾಹಿತಿ ಇನ್ನು ಹೊರಬಿದ್ದಿಲ್ಲ.
CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಜೂನ್ 20 ರಿಂದಲೇ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಮುಂಗಾರು ಅಧಿವೇಶನದ ಆರಂಭದ ದಿನವಾದ ಸೋಮವಾರದಂದು ಸಂಘಟನೆಯು ‘ಚಲೋ ಸಂಸತ್’ ಮೆರವಣಿಗೆಗೆ ಕರೆ ನೀಡಿತ್ತು.
ಬೆಳಗ್ಗೆಯಿಂದಲೇ ಜಂತರ್ ಮಂತರ್ನಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಜಮಾಯಿಸಿ ಸಂಸತ್ತಿನ ಕಡೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಪ್ರತಿಭಟನಾಕಾರರು ಮುರಿದು ಮುನ್ನುಗ್ಗಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಸಿಬ್ಬಂದಿ ಲಠಿಚಾರ್ಜ್ ನಡೆಸಿದ್ದಲ್ಲದೆ, ಕಣ್ಣೀರು ಅನಿಲವನ್ನು ಪ್ರಯೋಗಿಸಿ ಜನರನ್ನು ಚದುರಿಸಿದರು.
ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ನವದೆಹಲಿ ಜಿಲ್ಲೆಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪ್ಯಾರಾಮಿಲಿಟರಿ ಪಡೆಗಳ ಹೆಚ್ಚುವರಿ ತುಕಡಿಗಳನ್ನು ಮತ್ತು ನೆರೆಯ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಈ ಮಧ್ಯೆ, ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಿಜೆಪಿ (CJP) ಸಂಘಟನೆ ತಿಳಿಸಿದೆ. ಸಂಘಟನೆಯ ಇಬ್ಬರು ವಕ್ತಾರರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆಯ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್ನಲ್ಲಿ ತೀವ್ರ ಉದ್ವಿಗ್ನತೆ: ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್
ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಈ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಕಾನೂನು ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂತರ್ ಮಂತರ್ ಸುತ್ತಮುತ್ತಲಿನ ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗಾಗಿ ಬಂದ್ ಮಾಡಿದ್ದಾರೆ. ಮೆಟ್ರೋ ಸೇವೆ ಸ್ಥಗಿತಗೊಂಡಿರುವುದು ಮತ್ತು ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿರುವುದರಿಂದ ಜಂತರ್ ಮಂತರ್ನಿಂದ ಬರೋಬ್ಬರಿ ೪ ಕಿಲೋಮೀಟರ್ ವ್ಯಾಪ್ತಿಯವರೆಗೆ ಭೀಕರ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ವಾಹನಗಳು ಗಂಟೆಗಟ್ಟಲೆ ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರ ಸಂಚಾರ ಸಂಪೂರ್ಣ ದುಸ್ತರವಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

