ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಜುಲೈ 23, 2026 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಜೆ ಅನ್ವಯವಾಗುವ ಸಂಸ್ಥೆಗಳು:
ಎಲ್ಲಾ ಅಂಗನವಾಡಿ ಕೇಂದ್ರಗಳು.
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು.
ವಸತಿ ಶಾಲೆಗಳು.
ಪದವಿ ಪೂರ್ವ (PUC – 12ನೇ ತರಗತಿವರೆಗೆ) ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳು.
ಕಾನೂನು ಎಚ್ಚರಿಕೆ: ಈ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ಅಡಿಯಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳು:
ಪಾಲಕರಿಗೆ ಜಾಗ್ರತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಕಟ್ಟುನಿಟ್ಟಿನ ಜಾಗ್ರತೆ ವಹಿಸಬೇಕು.
ಮೀನುಗಾರರಿಗೆ ಎಚ್ಚರಿಕೆ: ಮಳೆಯ ಅಬ್ಬರ ಹಾಗೂ ಸಮುದ್ರ ಕೊರೆತ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರವಾಸಿಗರಿಗೆ ನಿರ್ಬಂಧ: ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ತೀರ ಹಾಗೂ ಕಡಲತೀರಗಳಿಗೆ ತೆರಳಬಾರದು.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು ಹಾಗೂ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.
ಕಾಳಜಿ ಕೇಂದ್ರಗಳು: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ನಿರ್ದೇಶಿಸಲಾಗಿದೆ.
ಇದನ್ನೂ ಓದಿ: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ಯೆಲ್ಲೋ ಅಲರ್ಟ್ ಘೋಷಣೆ
ತುರ್ತು ಸಹಾಯವಾಣಿ
ಪ್ರಾಕೃತಿಕ ವಿಕೋಪ ಅಥವಾ ಮಳೆಯಿಂದ ಯಾವುದೇ ತುರ್ತು ಸಮಸ್ಯೆಗಳು ಎದುರಾದಲ್ಲಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
ಟೋಲ್ ಫ್ರೀ ಸಂಖ್ಯೆ: 1077
ದೂರವಾಣಿ ಸಂಖ್ಯೆ: 0824-2442590
ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

