ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ದರ್ಶನ್ ಅವರು ಜುಲೈ 24 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳು ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿ ವಿದ್ಯಾರ್ಥಿಗಳಿಗೂ (ಎಲ್ಲಾ ವಸತಿ ಕಾಲೇಜುಗಳು ಸೇರಿದಂತೆ), ಹಾಗೆಯೇ ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಕಾಲೇಜುಗಳು ಸೇರಿದಂತೆ) ರಜೆ ಅನ್ವಯವಾಗಲಿದೆ.
ಇದನ್ನೂ ಓದಿ: ಸೇಡಿಯಾಪಿನ ಕಾಪು ಬಳಿ ಟಾಟಾ ಏಸ್ ಪಲ್ಟಿ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು
ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳು ಅಥವಾ ಸಂಬಂಧಪಟ್ಟವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

