ಗದಗದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ‘ಇದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಪೋಷಕರ ಗಂಭೀರ ಆರೋಪ

ಗದಗ: ಗದಗ ನಗರದ ನಾಗಾವಿ ಬಳಿಯಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ (KSMRDPRU) ವಸತಿ ನಿಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ಕಲಿಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ (25) ಅವರ ಶವ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಎಲ್ಲ ಪರೀಕ್ಷೆಗಳಲ್ಲೂ ಅತ್ಯುತ್ತಮ ಅಂಕಗಳನ್ನು ಪಡೆಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯ ಸಾವಿನ ಸುತ್ತ ಇದೀಗ ಸಾಲು ಸಾಲು ಅನುಮಾನಗಳು ವ್ಯಕ್ತವಾಗಿದ್ದು, ಇದು ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯವರಾದ ವೀಣಾ ಹಾನಾಪುರ ಅವರು ವಿವಿ ಹಾಸ್ಟೆಲ್‌ನ ಡಬಲ್ ಬೆಡ್ ಕಾಟ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಘಟನಾ ಸ್ಥಳದ ಪರಿಸ್ಥಿತಿ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ:ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು; ತೀರ್ಪು ಕಾಯ್ದಿರಿಸಿದ ಪೀಠ

ವಿದ್ಯಾರ್ಥಿನಿಯ ಶವವು ಮೊಣಕಾಲು ನೆಲಕ್ಕೆ ತಾಗುವ/ಮಂಡಿಯೂರಿದ ಸ್ಥಿತಿಯಲ್ಲಿ ಕಂಡುಬಂದಿದೆ. ಮೃತರ ಮುಖದ ಮೇಲೆ ಗಾಯಗಳಾಗಿದ್ದು, ಮೂಗಿನಿಂದ ರಕ್ತ ಬಂದಿದೆ. ಯಾರೋ ಆಕೆಯ ಮೇಲೆ ತೀವ್ರ ಹಲ್ಲೆ ನಡೆಸಿ, ಬಳಿಕ ನೇಣು ಹಾಕಿದ್ದಾರೆ ಎಂದು ಪೋಷಕರು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಷಕರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸುವ ಮುನ್ನವೇ ವಿಶ್ವವಿದ್ಯಾಲಯದ ಸಿಬ್ಬಂದಿ ಶವವನ್ನು ಆಸ್ಪತ್ರೆಗೆ ರವಾನಿಸಿರುವುದು ವಿವಿ ಆಡಳಿತ ಮಂಡಳಿಯ ಮೇಲಿನ ಅನುಮಾನವನ್ನು ಹೆಚ್ಚಿಸಿದೆ.”ನಮ್ಮ ಮಗಳು ಧೈರ್ಯವಂತೆಯಾಗಿದ್ದು, ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಲಾಗುತ್ತಿದೆ” ಎಂದು ಪೋಷಕರು ಆರೋಪಿಸಿದ್ದು, ಮಗಳ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *