ಬೆಂಗಳೂರು : ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ದಾಖಲಾಗಿದ್ದ ಎಫ್ಐಆರ್ (FIR) ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.
ಮತ್ತೊಂದೆಡೆ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ (Coercive Action) ಕೈಗೊಳ್ಳದಂತೆ ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಿದೆ.
ಸಿ.ಟಿ. ರವಿ ಪರ ವಾದಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಚಿಕ್ಕಮಗಳೂರು ನಗರ ಠಾಣೆಯಲ್ಲಿ BNS ಸೆಕ್ಷನ್ 353(2) ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ ಸಂಖ್ಯೆ 149ಕ್ಕೆ ಮಧ್ಯಂತರ ತಡೆ ನೀಡಬೇಕು. ಈ ಪ್ರಕರಣದಲ್ಲಿ ದೂರುದಾರರು ಮೂರನೇ ವ್ಯಕ್ತಿಯಾಗಿದ್ದು, ತಡೆ ನೀಡಬೇಕೆಂದು ಮನವಿ ಮಾಡಿದರು.
ಎಸ್ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿ, “ವಿಚಾರಣೆ ನೋಟಿಸ್ ನೀಡಲು ತೆರಳಿದ್ದ ಪೊಲೀಸರಿಗೆ ಸಿ.ಟಿ. ರವಿ ಅವರು ಬೆದರಿಕೆ ಹಾಕಿದ್ದು, ಕಾಂಗರೂ ಕೋರ್ಟ್ನಂತೆ ವರ್ತಿಸಿದ್ದಾರೆ” ಎಂದು ಪ್ರತಿವಾದ ಮಂಡಿಸಿದರು.ಉಭಯ ಪಕ್ಷಗಳ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಸಿ.ಟಿ. ರವಿ ಅವರ ವಿರುದ್ಧ ಪೊಲೀಸರು ಯಾವುದೇ ರೀತಿಯ ಬಲವಂತದ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶನ ನೀಡಿದೆ.
ಇದನ್ನೂ ಓದಿ: ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ
ವಿವಾದಕ್ಕೆ ಕಾರಣವೇನು?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಿ.ಟಿ. ರವಿ, “ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು?” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಮುಸ್ಲಿಂ ಸಮುದಾಯದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಜಾಮಿಯಾ ಮಸೀದಿ ಸಮಿತಿ ದೂರು & ನೋಟಿಸ್:
ಚಿಕ್ಕಮಗಳೂರಿನ ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ಅವರು ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಹಾಜರಾಗುವಂತೆ ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರು. ಅವರು ಸಿಗದಿರುವಾಗ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ್ ಅವರು ಸಿ.ಟಿ. ರವಿ ಅವರ ನಿವಾಸದ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದರು. ಶಾಸಕರು ಹಾಗೂ ಸಂಸದರ ಮೇಲಿನ ಪ್ರಕರಣಗಳಾದ ಹಿನ್ನೆಲೆಯಲ್ಲಿ ಈ ಕೇಸ್ ಅನ್ನು ಈಗ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

