Breaking News

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಾಲು ಸಾಲು ರಾಜೀನಾಮೆಗೆ ಮುಂದಾದ ಶಾಸಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಪಕ್ಷದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಬಿಕ್ಕಟ್ಟು ಸೃಷ್ಟಿಯಾಗಿದೆ.

ತಮಗೆ ಉದ್ದೇಶಪೂರ್ವಕವಾಗಿ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನನಗೆ ತೀವ್ರ ನೋವಾಗಿದೆ. ಮೂರು ವರ್ಷ ಮಂತ್ರಿಯಾದವರಿಗೇ ಮತ್ತೆ ಅವಕಾಶ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಮಕ್ಕಳು ಮತ್ತು ಮಂತ್ರಿಗಳ ಮಕ್ಕಳೇ ಸಚಿವರಾಗಬೇಕಾ? ಹೊಸಬರಿಗೆ ಅವಕಾಶ ನೀಡುತ್ತೇವೆ ಅನ್ನುತ್ತಾರೆ, ಇದೇನಾ ಅವರು ಕೊಟ್ಟಿರುವ ಅವಕಾಶ? ನನ್ನಂತೆಯೇ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ.”

ಇಂಡಿ ಕ್ಷೇತ್ರದ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮಗೆ ಸಚಿವ ಸ್ಥಾನ ಕೈತಪ್ಪಿದ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿನ ದಿನಗಳಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಸಚಿವ ಸ್ಥಾನ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿದ್ದರೂ ಕೊನೆ ಕ್ಷಣದಲ್ಲಿ ಕೈಬಿಟ್ಟಿದ್ದಾರೆ.

ವರಿಷ್ಠರು ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಕ್ಕೆ ಮನಸ್ಸಿಗೆ ಭಾರಿ ಬೇಸರವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ಪೀಕರ್ ಭೇಟಿಗೆ ಸಮಯ ಕೇಳಿದ್ದು, ಬೆಂಬಲಿಗರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಕೇವಲ ಶಾಸಕರು ಮಾತ್ರವಲ್ಲದೆ ಅವರ ಬೆಂಬಲಿಗರು ಹಾಗೂ ವಿವಿಧ ಜಿಲ್ಲೆಗಳ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ಹೊರಹಾಕುತ್ತಿದ್ದಾರೆ. ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದ್ದಕ್ಕೆ ಆಕ್ರೋಶಗೊಂಡ ಬೆಂಬಲಿಗ ತಬ್ರೇಜ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿಗೆ ಎಐಸಿಸಿ ಅಂತಿಮ ಅನುಮೋದನೆ

ಜಿಲ್ಲೆಗೆ ಪೂರ್ಣ ನಿರಾಸೆಯಾಗಿದ್ದು, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ಅಸಮಾಧಾನಿತ ಶಾಸಕರು ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಹಂಪನಗೌಡ ಬಾದರ್ಲಿ ಬೆಂಬಲಿಗರು ರಸ್ತೆ ತಡೆದು ಹಾಗೂ ಶಾಸಕರ ಭವನದ ಬಳಿ ಭಾರಿ ಧರಣಿ ನಡೆಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *