ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಶೂಟೌಟ್ ಘಟನೆ ನಡೆದಿದ್ದು, ಉದ್ಯಮಿ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಸರಣಿ ದಾಳಿಯ ಘಟನೆಯು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹಾಗೂ ಸಂಚಲನವನ್ನು ಸೃಷ್ಟಿಸಿದೆ.
ದುಷ್ಕರ್ಮಿಗಳು ಉದ್ಯಮಿ ಡೇವಿಡ್ ಡಿಸೋಜಾ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಡೇವಿಡ್ ಡಿಸೋಜಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಉಡುಪಿ ಉದ್ಯಮಿ ಸಂದೀಪ್ ಸಾಲಿಯಾನ್ ಸಾವು ಪ್ರಕರಣಕ್ಕೆ ಟ್ವಿಸ್ಟ್; ಹನಿ ಟ್ರ್ಯಾಪ್ ಜಾಲದ ಮಂಗಳೂರಿನ ಮಹಿಳೆ ಬಂಧನ
ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ, ಆಸ್ತಿ ವಿವಾದ ಅಥವಾ ವೃತ್ತಿಪರ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉದ್ಯಮಿಯನ್ನು ಶೂಟ್ ಮಾಡುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

