Breaking News

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ: ವಿಕಸಿತ ಭಾರತಕ್ಕೆ ಯುವಜನತೆಯ ಕೊಡುಗೆ ಅಗತ್ಯ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಕಲ್ಲಡ್ಕ : ಇಲ್ಲಿನ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಪಠ್ಯೇತರ ಸಂಘಗಳ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪ್ರತಿಜ್ಞಾ ಸ್ವೀಕಾರ ಸಮಾರಂಭವು ಕಾಲೇಜಿನ ಆಜಾದ್ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು, “ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸೈನಿಕರ ಧೈರ್ಯ, ಶೌರ್ಯ ಮತ್ತು ಬಲಿದಾನಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದರ್ಶವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತಾ ಸಮಾಜ ಹಾಗೂ ರಾಷ್ಟ್ರದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳಬೇಕು,” ಎಂದು ಕರೆ ನೀಡಿದರು.

 

ಉಡುಪಿಯ ಉಜ್ವಲ್ ಗ್ರೂಪ್ ಆಫ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಅಜಯ್ ಪುರುಷೋತ್ತಮ ಶೆಟ್ಟಿ ಇವರು ದೀಪ ಪ್ರಜ್ವಲನೆ ಹಾಗೂ ಟಿವಿ ಪರದೆಯ ಅನಾವರಣದ ಮೂಲಕ ವಿವಿಧ ಸಂಘಗಳನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, “ಶಿಸ್ತು, ಕರ್ತವ್ಯಪ್ರಜ್ಞೆ ಮತ್ತು ದೇಶಭಕ್ತಿಯನ್ನು ಮೈಗೂಡಿಸಿಕೊಂಡಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಲಭಿಸಲು ಸಾಧ್ಯ. ಭಾರತವನ್ನು ‘ವಿಶ್ವಗುರು’ ಮಾಡುವ ಹಾಗೂ ‘ವಿಕಸಿತ ಭಾರತ’ದ ಕನಸನ್ನು ನನಸು ಮಾಡುವಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು,” ಎಂದರು.

ಇದನ್ನೂ ಓದಿ: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವೈಭವದ ‘ಆಟಿದ ಕೂಟ’: ಹಿರಿಯರ ನಂಬಿಕೆ, ಪರಂಪರೆಯರಿತ ವಿದ್ಯಾರ್ಥಿಗಳು

ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಸಹಕಾರ್ಯದರ್ಶಿ, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ತರಗತಿ ಪ್ರತಿನಿಧಿಗಳಿಗೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಪ್ರಮಾಣ ವಚನ ಬೋಧಿಸಿದರು. ಮತದಾನ ಸಾಕ್ಷರತಾ ಘಟಕದ ನಿರ್ದೇಶಕಿ ಶ್ರೀಮತಿ ಆಶಾಲತಾ ಚುನಾವಣಾ ವರದಿಯನ್ನು ವಾಚಿಸಿದರು.

ವೇದಿಕೆಯಲ್ಲಿ ಪ್ರಗತಿಪರ ಕೃಷಿಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ, ಉಪ ಪ್ರಾಂಶುಪಾಲೆ ಶ್ರೀಮತಿ ಸುಕನ್ಯಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಪ ಪ್ರಾಂಶುಪಾಲ ಯತಿರಾಜ್ ಪೆರಾಜೆ ಸ್ವಾಗತಿಸಿದರು. ಅಂತಿಮ ಬಿಸಿಎ ವಿದ್ಯಾರ್ಥಿನಿ ಕು. ದಿಲೀಕ್ಷಾ ಧನ್ಯವಾದ ಸಮರ್ಪಿಸಿದರೆ, ಬಿಎ ವಿದ್ಯಾರ್ಥಿನಿ ಕು. ಅಕ್ಷತ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸನ್ನಿವೇಶಕ್ಕೆ ಸಿಹಿ ವಿತರಿಸಲಾಯಿತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *