ಬೆಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳ ರಸ್ತೆ ಅಭಿವೃದ್ಧಿ ಹಾಗೂ ಅಂಬೇಡ್ಕರ್ ಭವನದ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಆಗ್ರಹಿಸಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಮೂಲಸೌಕರ್ಯ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ₹10 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಶಾಸಕರು ಸಚಿವರಿಗೆ ವಿನಂತಿಸಿದರು.
ಸುಳ್ಯದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನದ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ ಎರಡು ತಿಂಗಳು ಕಳೆದರೂ ಇನ್ನು ಅನುಮೋದನೆ ದೊರೆತಿಲ್ಲ. ಹೀಗಾಗಿ ಶೀಘ್ರವೇ ಅನುಮೋದನೆ ನೀಡಿ, ಕಾಮಗಾರಿ ತಕ್ಷಣ ಪ್ರಾರಂಭಿಸಲು ಅನುಕೂಲ ಮಾಡಿಕೊಡಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿತು.
ಇದನ್ನೂ ಓದಿ: ಮೊಬೈಲ್ ಫೋನ್ ವಿಚಾರಕ್ಕೆ ಕುಟುಂಬದಲ್ಲಿ ಗಲಾಟೆ: ಪ್ರಪಾತಕ್ಕೆ ಜಿಗಿದು ಒಂದೇ ಕುಟುಂಬದ ಮೂವರ ದಾರುಣ ಸಾವು
ಶಾಸಕಿ ಭಾಗೀರಥಿ ಮುರುಳ್ಯ ಅವರ ಮನವಿಯನ್ನು ಆಲಿಸಿದ ಸಚಿವ ಕೆ.ಎಚ್. ಮುನಿಯಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. “ಪ್ರಸ್ತುತ ನಡೆಯುತ್ತಿರುವ ಅಧಿವೇಶನ ಮುಗಿದ ತಕ್ಷಣವೇ ಈ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

