ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ತೀವ್ರ ಭಯ ಹುಟ್ಟಿಸಿದ್ದ ಎರಡು ಪ್ರತ್ಯೇಕ ಚಿರತೆಗಳು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಸ್ಥಳೀಯ ಜನರಲ್ಲಿ ನಿರಾಳತೆ ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹನ್ನಾಡಿಫಲ್ಕೆಯ ಬಾಲಕೃಷ್ಣ ನಾಯಕ್ ಅವರ ಮನೆಯ ಬಳಿ ಮಂಗಳವಾರ (ಸೆಪ್ಟೆಂಬರ್ ೧) ಚಿರತೆಯೊಂದು ಬೋನಿಗೆ ಬಿದ್ದಿದೆ.
ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಚಿರತೆ ಸಂಚರಿಸುತ್ತಿರುವ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಬೋನಿಗೆ ಬಿದ್ದ ಚಿರತೆಗೆ ಸುಮಾರು ೨ ವರ್ಷ ವಯಸ್ಸಾಗಿದ್ದು, ಅದು ಸಂಪೂರ್ಣ ಆರೋಗ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಆಲದಂಗಡಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಅರಣ್ಯ ರಕ್ಷಕ ಮಂಜುನಾಥ್ ಬಿ.ಎಸ್., ವೀಕ್ಷಕರಾದ ವೆಂಕಪ್ಪ ನಾಯಕ್, ಪೂವಪ್ಪ ನಾಯಕ್ ಹಾಗೂ ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು. ಚಿರತೆಯನ್ನು ಪಶುವೈದ್ಯರ ತಪಾಸಣೆಯ ನಂತರ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ. ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಅಚ್ಲಾಡಿಯಲ್ಲೂ ಕಳೆದ ಕೆಲವು ದಿನಗಳಿಂದ ಭೀತಿ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆಯು ಸಾಕುಪ್ರಾಣಿಗಳ ಮೇಲೆ ದಾಳಿ ಮಾಡಬಹುದು ಎಂಬ ಭಯದಿಂದ ಗ್ರಾಮಸ್ಥರು ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಬರಲು ಹೆದರುತ್ತಿದ್ದರು.
ಇದನ್ನೂ ಓದಿ: ಆಹಾರ ಸುರಕ್ಷತೆಗೆ ಕ್ಯೂಆರ್ ಕೋಡ್ ಕಡ್ಡಾಯ, ಮಂಗಳೂರು ದಸರಾ ಸಂಭ್ರಮ: ಯು.ಟಿ. ಖಾದರ್ ಮಹತ್ವದ ಘೋಷಣೆ
ದೂರುಗಳ ಆಧಾರದ ಮೇಲೆ ಚಿರತೆ ಹೆಚ್ಚಾಗಿ ಸಂಚರಿಸುತ್ತಿದ್ದ ಮುಖ್ಯ ಸ್ಥಳವನ್ನು ಗುರುತಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು. ಮಂಗಳವಾರ ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ವಶಕ್ಕೆ ಪಡೆದಿದ್ದಾರೆ.ಈ ಚಿರತೆಗೂ ವೈದ್ಯಕೀಯ ತಪಾಸಣೆ ನಡೆಸಿ, ನಂತರ ದಟ್ಟ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

