ಸುಳ್ಯ: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಮುಖ 35 ಬೇಡಿಕೆಗಳ ಪಟ್ಟಿಯನ್ನು ಒಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಗಿದೆ.
ಸಂಪುಟ ಸಭೆಯಲ್ಲಿ ಈ ವಿಷಯಗಳನ್ನು ವಿಶೇಷವಾಗಿ ಚರ್ಚಿಸಿ, ಕ್ಷೇತ್ರಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಡಿಕೆಶಿ ಅವರನ್ನು ಒತ್ತಾಯಿಸಿದ್ದಾರೆ.
ಕೆದಂಬಾಡಿ ರಾಮಯ್ಯಗೌಡ ಥೀಮ್ ಪಾರ್ಕ್ ನಿರ್ಮಾಣ:
1837ರ ಐತಿಹಾಸಿಕ ‘ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ’ದ ವೀರ ಹೋರಾಟಗಾರರ ನೆನಪನ್ನು ಚಿರಸ್ಥಾಯಿಗೊಳಿಸಲು ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ‘ಕೆದಂಬಾಡಿ ರಾಮಯ್ಯಗೌಡ ಥೀಮ್ ಪಾರ್ಕ್’ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭೂಗತ ವಿದ್ಯುತ್ ಕೇಬಲ್ ಅಳವಡಿಕೆ:
ಸುಳ್ಯ ಕ್ಷೇತ್ರದಲ್ಲಿ ಮಳೆಗಾಲದಲ್ಲಿ ಎದುರಾಗುವ ನಿರಂತರ ವಿದ್ಯುತ್ ಕಡಿತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು, 33KV ವಿದ್ಯುತ್ ಸಂಪರ್ಕ ಲೈನ್‌ಗಳನ್ನು ಭೂಗತ (Underground) ಕೇಬಲ್‌ಗಳಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಪ್ರಶಂಸೆ, ಬೆಂಬಲಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ:
ಕರಾವಳಿಯ ಸಾಂಸ್ಕೃತಿಕ ಗುರುತಾಗಿರುವ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ೨ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅಭಿವೃದ್ಧಿ ಯೋಜನೆಗಳಿಗೆ ಅನುದಾನದ ನಿರೀಕ್ಷೆ:
ಸಂಪುಟ ಸಭೆಯು ಮಂಗಳೂರಿನಲ್ಲೇ ನಡೆಯುತ್ತಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದ ಗಡಿ ತಾಲೂಕಾದ ಸುಳ್ಯಕ್ಕೆ ವಿಶೇಷ ಆದ್ಯತೆ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಮೂಲಸೌಕರ್ಯ, ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಹಾಗೂ ಕೃಷಿ ವಲಯದ ಪ್ರಮುಖ ಬೇಡಿಕೆಗಳನ್ನು ಸಂಪುಟ ಸಭೆಯ ಅಜೆಂಡಾದಲ್ಲಿ ಸೇರಿಸಿ ತಕ್ಷಣವೇ ಹಣಕಾಸು ಅನುಮೋದನೆ ನೀಡಬೇಕೆಂದು ವಿನಂತಿಸಿದ್ದಾರೆ.

