ಮಂಗಳೂರು: ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಬೃಹತ್ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಶಾಸಕ ಹಾಗೂ ಹೋರಾಟದ ಸಂಚಾಲಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಪೂರ್ಣ ಸ್ಥಗಿತ :
ಅನುದಾನ ಅಭಾವ & PDO ನೇಮಕಾತಿ ವಿಳಂಬ:
ಗ್ರಾಮ ಪಂಚಾಯತಿಗಳಿಗೆ ಸಮರ್ಪಕ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕಾಮಗಾರಿಗಳು ನಿಂತಿವೆ. 2024ರಲ್ಲಿ ಆರಂಭವಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇಂದಿಗೂ ಪೂರ್ಣಗೊಂಡಿಲ್ಲ.
ಇ-ಸ್ವತ್ತು & ಪಂಚತಂತ್ರ ಸರ್ವರ್ ಕಿರಿಕಿರಿ:
ಇ-ಸ್ವತ್ತು ಹಾಗೂ ಪಂಚತಂತ್ರ ತಂತ್ರಾಂಶಗಳ ಸತತ ಸರ್ವರ್ ದೋಷದಿಂದ ಸಾರ್ವಜನಿಕರು ಆಸ್ತಿ ದಾಖಲೆ ಸಿಗದೆ ಅಲೆದಾಡುವಂತಾಗಿದೆ.
ಬಡವರ ಸೂರು ಕಸಿದ ಸರ್ಕಾರ:
ಬಸವ ವಸತಿ ಹಾಗೂ ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಕಳೆದ 3 ವರ್ಷಗಳಿಂದ ಮನೆಗಳನ್ನು ಮಂಜೂರು ಮಾಡಿಲ್ಲ. ಅಲ್ಲದೆ, ನಕ್ಷೆ ಅನುಮೋದನೆ ಅಧಿಕಾರವನ್ನು ಮತ್ತೆ ಪಂಚಾಯತಿಗಳಿಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಪಿಂಚಣಿ & ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ:
ಗೃಹಲಕ್ಷ್ಮಿ ಯೋಜನೆಯ ಸಹಾಯಧನ, ವೃದ್ಧಾಪ್ಯ ಹಾಗೂ ವಿಧವಾ ವೇತನದ ಮಾಸಾಶನ ಕಳೆದ 6 ತಿಂಗಳಿಂದ ಬಿಡುಗಡೆಯಾಗದೆ ಹಿರಿಯ ನಾಗರಿಕರು ಮತ್ತು ಮಹಿಳೆಯರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಅಮೆರಿಕ-ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ವಿವಾದಾತ್ಮಕ ಹೇಳಿಕೆ
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ & ನಗರಗಳ ಸಮಸ್ಯೆ:
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಅಧಿಕಾರ ವಿಕೇಂದ್ರೀಕರಣ ಹಾಗೂ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಿಬ್ಬಂದಿ ಕೊರತೆ, ಪರಿಷ್ಕೃತ ಕನಿಷ್ಠ ವೇತನ ಜಾರಿಯಾಗದಿರುವುದು ಹಾಗೂ ಕಟ್ಟಡ ಪರವಾನಗಿ ತಂತ್ರಾಂಶ (LBPAS) ವೈಫಲ್ಯದಿಂದ ನಿರ್ಮಾಣ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ.
ಈ ಎಲ್ಲಾ ಆಡಳಿತ ವೈಫಲ್ಯಗಳನ್ನು ಖಂಡಿಸಿ ಪ್ರಜಾಸತ್ತಾತ್ಮಕ ಮಾದರಿಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಪ್ರಮುಖ ಸಂಘಟನೆಗಳು ಕೈಜೋಡಿಸುವಂತೆ ಕಿಶೋರ್ ಕುಮಾರ್ ಪುತ್ತೂರು ಆಹ್ವಾನಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

