ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯ ಕುರಿತು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಹಾಗೂ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ಆರೋಪಿಯೊಬ್ಬರ ಮೊಬೈಲ್ ನೆಟ್ವರ್ಕ್ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಪತ್ತೆಯಾಗಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಆಯುಕ್ತರು ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ.

“ಪೊಲೀಸ್ ಕಮಿಷನರ್ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಈ ನಕಲಿ ಅಥವಾ ತೇಜೋವಧೆ ಮಾಡುವ ವೀಡಿಯೊವನ್ನು ಅಪ್ಲೋಡ್ ಮಾಡಿಸಿದ ಆರೋಪಿಯ ಮೊಬೈಲ್ ಲೋಕೇಶನ್ ಕುಮಾರಸ್ವಾಮಿ ಅವರ ಮನೆಯಲ್ಲಿ ಟ್ರೇಸ್ ಆಗಿದೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ” ಎಂದು ಯತೀಂದ್ರ ಹೇಳಿದರು.
“ನಮಗೆ ಸರ್ಕಾರದ ತನಿಖಾ ಸಂಸ್ಥೆಗಳ ಮೇಲೆ ಸಂಪೂರ್ಣ ಭರವಸೆಯಿದೆ. ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಸ್ಟಿಂಗ್ ಆಪರೇಷನ್ ನಡೆಸಿದವರು ಮಾತ್ರವಲ್ಲದೆ, ಅದನ್ನು ಉದ್ದೇಶಪೂರ್ವಕವಾಗಿ ಹರಡಿ ತೇಜೋವಧೆ ಮಾಡಲು ಯತ್ನಿಸಿದವರ ಮೇಲೆಯೂ ಶಿಸ್ತು ಕ್ರಮ ಜರುಗಿಸಬೇಕು” ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಸ್ಟಿಂಗ್ ಕೇಸ್ನಲ್ಲಿ ಹಿರಿಯ ನಾಯಕಿ ಕೃಪಾ ಆಳ್ವಾ ಕಳ್ಳಾಟ!: ಸಂತ್ರಸ್ತೆಯ ಇ-ಮೇಲ್ ದೂರು ಮುಚ್ಚಿಹಾಕಲು ಯತ್ನ?
ಯಾವುದೇ ಪ್ರಮುಖ ರಾಜಕಾರಣಿಯ ಹೆಸರು ಅಥವಾ ಆರೋಪ ಬಂದರೆ ಅದನ್ನು ರಾಜಕೀಯಗೊಳಿಸುವುದು ಸಾಮಾನ್ಯ ಎಂದು ಅಭಿಪ್ರಾಯಪಟ್ಟ ಯತೀಂದ್ರ, ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಶೀಘ್ರದಲ್ಲೇ ಹೊರಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

