ಬೆಂಗಳೂರು; ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರವು ಇದೀಗ ಕರ್ನಾಟಕ ಮತ್ತು ತಮಿಳುನಾಡು ಕಾಂಗ್ರೆಸ್ ನಾಯಕರ ನಡುವೆಯೇ ತೀವ್ರ ವಾಕ್ಸಮರಕ್ಕೆ ನಾಂದಿ ಹಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ, ತಮಿಳುನಾಡಿನ ವಿಜಯ್ (Vijay) ನೇತೃತ್ವದ ಸರ್ಕಾರದಲ್ಲಿ ಕಾಂಗ್ರೆಸ್ ಮಿತ್ರಪಕ್ಷವಾಗಿದೆ.
ಶುಕ್ರವಾರ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಶೀಘ್ರ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, ಶನಿವಾರ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಟಾಗೋರ್ ಅವರು ಸಿಎಂ ಡಿಕೆಶಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

“ಡಿಕೆಶಿ ಹಠಮಾರಿ ಧೋರಣೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧ”: ಮಾಣಿಕ್ಕಂ ಟಾಗೋರ್ ಕಿಡಿ!
ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ಪ್ರತಿಕ್ರಿಯಿಸಿರುವ ಮಾಣಿಕ್ಕಂ ಟಾಗೋರ್, “ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ‘ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಮತ್ತು ಕೇಂದ್ರ ಸರ್ಕಾರ ಇದಕ್ಕೆ ಅಂತಿಮ ಅನುಮತಿ ನೀಡಬೇಕು’ ಎಂದು ಹೇಳಿರುವುದು ತೀವ್ರ ಖಂಡನೀಯ” ಎಂದಿದ್ದಾರೆ. “ಕರ್ನಾಟಕದ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ತೀರ್ಪು ಮತ್ತು ಕಾವೇರಿ ಜಲವಿವಾದ ನ್ಯಾಯಮಂಡಳಿಯ (CWDT) ಅಂತಿಮ ತೀರ್ಪನ್ನು ಸ್ಪಷ್ಟವಾಗಿ ಉಲ್ಲಂಘಿಸಿ ಹಠಮಾರಿ ಧೋರಣೆಯನ್ನು ಮುಂದುವರಿಸಿದ್ದಾರೆ. ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾದ ಮತ್ತು ತಮಿಳುನಾಡಿನ ರೈತರ ಜೀವನೋಪಾಯವನ್ನು ನಾಶಮಾಡಲು ಹೊರಟಿರುವ ಈ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ” ಎಂದು ಟಾಗೋರ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕಾವೇರಿ ನೀರು ವಿವಾದ: ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ; ರಾಜ್ಯದ ಹಿತಕ್ಕೆ ರಾಜಿ ಇಲ್ಲ ಎಂದ ಡಿಕೆ ಶಿವಕುಮಾರ್

ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ಶುಕ್ರವಾರ ಮೈಸೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಡಿ.ಕೆ. ಶಿವಕುಮಾರ್, “ಸರ್, ನೀವೀಗ ತಾನೇ ಕಾವೇರಿ ನದಿಗೆ ಕಟ್ಟಿರುವ ಅಣೆಕಟ್ಟನ್ನು (ಕೆಆರ್ಎಸ್) ವೀಕ್ಷಿಸಿದ್ದೀರಿ. ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ನಿರ್ಮಿಸಲು ಸುಪ್ರೀಂ ಕೋರ್ಟ್ ನಮಗೆಲ್ಲರಿಗೂ ಸ್ಪಷ್ಟ ತೀರ್ಪು ನೀಡಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ಯೋಜನೆಗೆ ಕಾನೂನಾತ್ಮಕವಾಗಿ ಮತ್ತು ಶಾಸನಬದ್ಧ ಅನುಮತಿಗಳನ್ನು ಶೀಘ್ರವಾಗಿ ಕೊಡಿಸುವ ಮೂಲಕ ನೀವು ನಮಗೆ ಸಹಾಯ ಮಾಡಬೇಕೆಂದು ಕೋರುತ್ತೇವೆ” ಎಂದು ಮನವಿ ಮಾಡಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


