ಬೆಂಗಳೂರು; ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಂತೂ ಕಾಲ ಕೂಡಿ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಜಿಲ್ಲಾ ಪಂಚಾಯಿತಿ (ZP) ಹಾಗೂ ತಾಲ್ಲೂಕು ಪಂಚಾಯಿತಿ (TP) ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯ ಅಧಿಕೃತ ರಾಜ್ಯಪತ್ರವನ್ನು (Gazette Notification) ಪ್ರಕಟಿಸಿದೆ.
ಅಂತಿಮ ಮೀಸಲಾತಿ ಅಧಿಸೂಚನೆಯ ಪ್ರಮುಖ ಅಂಶಗಳು:

ರಾಜ್ಯದ ಎಲ್ಲಾ 31 ಜಿಲ್ಲೆಗಳ 1,129 ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಗಳು ಹಾಗೂ 239 ತಾಲ್ಲೂಕು ಪಂಚಾಯಿತಿಗಳ 3,656 ಸದಸ್ಯ ಸ್ಥಾನಗಳಿಗೆ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅನ್ವಯ ಮೀಸಲಾತಿ ನಿಗದಿಪಡಿಸಲಾಗಿದ್ದು, ಒಟ್ಟು ಸ್ಥಾನಗಳಲ್ಲಿ ಶೇ. 50ಕ್ಕೂ ಹೆಚ್ಚು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗಿದೆ.
ಇದನ್ನೂ ಓದಿ: ಅಮೆರಿಕ ಮಧ್ಯಂತರ ಚುನಾವಣೆ : ಯುಎಸ್ ಸೆನೆಟ್ನಲ್ಲಿ ಡೊನಾಲ್ಡ್ ಟ್ರಂಪ್ ಪಕ್ಷಕ್ಕೆ ಹೀನಾಯ ಸೋಲು

ಜನವರಿಯಲ್ಲಿ ಚುನಾವಣೆ ಫಿಕ್ಸ್; ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ!
ಕ್ಷೇತ್ರಗಳ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜನವರಿಯಲ್ಲೇ ಚುನಾವಣೆ ನಡೆಸಲಾಗುವುದು ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದರು. ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಿದ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಲಿದೆ. ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದ್ದು, 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಈ ಬಾರಿಯ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿ ಇವಿಎಂ (EVM) ಬದಲಾಗಿ ಬ್ಯಾಲೆಟ್ ಪೇಪರ್ (Ballot Paper) ಬಳಸಲು ಸಚಿವ ಸಂಪುಟ ಈಗಾಗಲೇ ಸಮ್ಮತಿ ಸೂಚಿಸಿದೆ. ಇದರೊಂದಿಗೆ ಹಳೇ ಮತದಾರರ ಪಟ್ಟಿಯಲ್ಲೇ ಚುನಾವಣೆ ನಡೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ನಿಮ್ಮ ಕ್ಷೇತ್ರದ ಮೀಸಲಾತಿ ಪಟ್ಟಿ ಪರಿಶೀಲಿಸುವುದು ಹೇಗೆ?
ಅಧಿಕೃತ ಅಂತಿಮ ಮೀಸಲಾತಿ ಅಧಿಸೂಚನೆ ಹಾಗೂ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕಿನ ಕ್ಷೇತ್ರವಾರು ಮೀಸಲಾತಿ ಪಟ್ಟಿಯನ್ನು ರಾಜ್ಯಪತ್ರದ ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಚುನಾವಣೆಗೆ ಕೇವಲ ಎರಡು ತಿಂಗಳು ಬಾಕಿ ಇರುವುದರಿಂದ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಹಾಗೂ ಚುನಾವಣಾ ತಯಾರಿ ಜೋರಾಗಲಿದೆ.

