ಯೋಗೀಶ್ ಗೌಡ ಕೊಲೆ ಕೇಸ್‌ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ – ಹೈಕೋರ್ಟ್ ನೀಡಿದ್ದ ಜಾಮೀನು ರದ್ದು

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಮುಂದಿನ ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಮಹತ್ವದ ಆದೇಶ ಹೊರಡಿಸಿದೆ.

ಸಿಬಿಐ ಮೇಲ್ಮನವಿ ಪುರಸ್ಕರಿಸಿದ ಸುಪ್ರೀಂ ದ್ವಿಸದಸ್ಯ ಪೀಠ:

Advertisement

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ (CBI) ಮತ್ತು ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್: ಶಿಕ್ಷೆ ತಡೆಯಾಜ್ಞೆ, ಜಾಮೀನು ಮಂಜೂರು

Advertisement

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅತಂತ್ರ; ಮುಂದಿರುವ ಕಾನೂನು ಹಾದಿ ಏನು?

ಜಾಮೀನು ರದ್ದಾದ ಕಾರಣ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಿದರೆ ಅವರು ಶಾಸಕ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಪ್ರಸ್ತುತ ಅವರ ಜೀವಾವಧಿ ಶಿಕ್ಷೆಗೆ ನೀಡಲಾಗಿದ್ದ ತಡೆ ತೆರವಾಗಿರುವುದರಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ಮೇಲೆ ಅನರ್ಹತೆಯ ತೂಗುಗತ್ತಿ ನೇತಾಡುತ್ತಿದೆ. ಸದ್ಯಕ್ಕೆ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಬಾಗಿಲು ಬಹುತೇಕ ಬಂದ್ ಆಗಿದ್ದು, ಮರುಪರಿಶೀಲನೆ ಅರ್ಜಿ ಸಲ್ಲಿಸಬಹುದಾದರೂ ಪರಿಗಣನೆಗೆ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆದರೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಅವರ ಮೇಲ್ಮನವಿ ವಿಚಾರಣೆ ಇನ್ನೂ ಬಾಕಿಯಿದೆ. ಹೀಗಾಗಿ ತುರ್ತು ವಿಚಾರಣೆಗೆ ಹೈಕೋರ್ಟ್‌ನಲ್ಲೇ ಮನವಿ ಮಾಡಬಹುದು. ಹೈಕೋರ್ಟ್ ಶೀಘ್ರ ವಿಚಾರಣೆ ನಡೆಸಿ ಖುಲಾಸೆಗೊಳಿಸಿದರೆ ಮಾತ್ರ ಕುಲಕರ್ಣಿಗೆ ರಿಲೀಫ್ ಸಿಗಲಿದ್ದು, ಒಂದೊಮ್ಮೆ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಎತ್ತಿ ಹಿಡಿದರೆ ಸಂಕಷ್ಟ ಮತ್ತಷ್ಟು ಬಿಗಡಾಯಿಸಲಿದೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ