ಬಾಗಲಕೋಟೆ: ನಗರದ ಹಳೆ ಬಾಗಲಕೋಟೆ ಭಾಗದಲ್ಲಿ ಶುಕ್ರವಾರ ಸಂಜೆ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸೇರಿದಂತೆ ಹಲವರು ಗಾಯಗೊಂಡಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಳೆ ಬಾಗಲಕೋಟೆಯ ಪಂಕಾ ಮಸೀದಿ ಮತ್ತು ಕಿಲ್ಲಾ ಓಣಿ ಪ್ರದೇಶದ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ.
ಮೆರವಣಿಗೆಯು ಇನ್ನೇನು ಮುಕ್ತಾಯವಾಗಲು 5 ನಿಮಿಷ ಬಾಕಿ ಇದೆ ಎನ್ನುವಾಗ, ಕಿಡಿಗೇಡಿಗಳು ಏಕಾಏಕಿ ಕಲ್ಲು ಮತ್ತು ಚಪ್ಪಲಿಗಳನ್ನು ಎಸೆದಿದ್ದಾರೆ. ಕಲ್ಲು ತೂರಾಟದಲ್ಲಿ ಬಾಗಲಕೋಟೆ ಎಸ್‌ಪಿ ಸಿದ್ಧಾರ್ಥ ಗೋಯಲ್ ಅವರ ಹೆಗಲಿಗೆ ಗಾಯವಾಗಿದೆ. ಅಲ್ಲದೆ, ಪ್ರಕಾಶ್ ಅರಕೇರಿ ಎಂಬ ಹಿಂದೂ ಕಾರ್ಯಕರ್ತ ಮತ್ತು ಒಬ್ಬ ಪೊಲೀಸ್ ಕಾನ್ಸ್ಟೇಬಲ್‌ಗೂ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಕೆಲವು ಕಿಡಿಗೇಡಿಗಳು ಮಾರುಕಟ್ಟೆ ಪ್ರದೇಶದಲ್ಲಿದ್ದ ಮೂರು ತಳ್ಳುಗಾಡಿಗಳಿಗೆ (Pushcarts) ಬೆಂಕಿ ಹಚ್ಚಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ಕಡಬದ ಯೂಟ್ಯೂಬರ್ ಸಂತೋಷ್ ಪೊಲೀಸ್ ಕಸ್ಟಡಿಗೆ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಆರೋಪ
ಮುಂಜಾಗ್ರತಾ ಕ್ರಮವಾಗಿ ಬಾಗಲಕೋಟೆ ನಗರದ ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ಸೆಕ್ಷನ್ 163 (BNSS) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಆದೇಶವು ಫೆಬ್ರವರಿ 24ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರಲಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 8 ಜನರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಎಸ್‌ಪಿ ಸಿದ್ಧಾರ್ಥ ಗೋಯಲ್ ತಿಳಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ‘ಬಾಗಲಕೋಟೆ ಬಂದ್’ ಮಾಡುವುದಾಗಿ ಕೆಲವು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

