ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಟಿವಿಗಳಿಗೆ ಮಾರುಹೋಗುತ್ತಿರುವ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಹಾಗೂ ಅವರ ಸಾಮಾನ್ಯ ಜ್ಞಾನವನ್ನು ವೃದ್ಧಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಮಕ್ಕಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ದೇಶ-ವಿದೇಶಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅರಿವು ಹೊಂದಿರಬೇಕು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪತ್ರಿಕೆ ಓದುವುದರಿಂದ ಮಕ್ಕಳಲ್ಲಿ ಭಾಷಾ ಪ್ರೌಢಿಮೆ ಹೆಚ್ಚುವುದಲ್ಲದೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಇದು ಅವರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೂ ಪೂರಕವಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಎನ್‌ಒಎಸ್ ಯೋಜನೆ: ವಿದೇಶದಲ್ಲಿ ಶಿಕ್ಷಣ ಪಡೆಯಲು ಇಚ್ಛಿಸುವವರಿಗೆ ಸುವರ್ಣಾವಕಾಶ
ಸುತ್ತೋಲೆಯಲ್ಲಿ ಏನಿದೆ?:

ಕಡ್ಡಾಯ ಓದು: ಶಾಲೆಗಳಲ್ಲಿ ನಿಗದಿತ ಸಮಯವನ್ನು ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು.
ಸುದ್ದಿ ಮಂಥನ: ಓದಿದ ಪ್ರಮುಖ ಸುದ್ದಿಗಳ ಬಗ್ಗೆ ವಿದ್ಯಾರ್ಥಿಗಳ ನಡುವೆ ಚರ್ಚೆ ಅಥವಾ ಪ್ರಾರ್ಥನಾ ಅವಧಿಯಲ್ಲಿ ಪ್ರಮುಖ ಮುಖ್ಯಾಂಶಗಳನ್ನು ಓದುವಂತೆ ಶಿಕ್ಷಕರು ಪ್ರೇರೇಪಿಸಬೇಕು.
ಪತ್ರಿಕೆಗಳ ಲಭ್ಯತೆ: ಶಾಲಾ ಗ್ರಂಥಾಲಯ ಅಥವಾ ವಾಚನಾಲಯಗಳಲ್ಲಿ ಕನಿಷ್ಠ ಎರಡು ಪ್ರಾದೇಶಿಕ ದಿನಪತ್ರಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಈ ನಿಯಮವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

