ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಚರ್ಚ್ ರೋಡ್ನಲ್ಲಿ ಬುಧವಾರ (ನವೆಂಬರ್ 11) ಮುಂಜಾನೆ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟ ಒಬ್ಬರನ್ನು ನಾವೂರು ನಿವಾಸಿ ಸಂತೋಷ್ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನನ್ನು ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದ್ದು, ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ, ಗುರುುವಾಯನಕೆರೆ ಕಡೆಗೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಸರಣಿ ಅಪಘಾತ: ಕಾರು ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್
ಮೃತ ಸಂತೋಷ್ ಅವರು ಮಂಗಳೂರಿನಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಮೋಹನ್ ಅವರು ಬೆಳ್ತಂಗಡಿಯ ಸುವರ್ಣ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


