ದೆಹಲಿ: ದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸುತ್ತಲಿನ ವಿವಾದ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಮರ ಸಾರಿದೆ. ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ದೇಶಾದ್ಯಂತ ‘ಜಂತರ್ ಮಂತರ್ 2’ ಹೆಸರಿನಲ್ಲಿ ಬೃಹತ್ ಜನಾಂದೋಲನ ರೂಪಿಸುವುದಾಗಿ ಸಿಜೆಪಿ ಸ್ಥಾಪಕ ಅಭಿಜೀತ್ ದಿಪ್ಕೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಭಿಜೀತ್ ದಿಪ್ಕೆ, ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಲ್ಲದೆ, ಚುನಾವಣಾ ಆಯೋಗವು ಪ್ರಜೆಗಳ ಮತದಾನದ ಹಕ್ಕನ್ನು ಕಸಿಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಚುನಾವಣಾ ಆಯೋಗ ಕೈಗೊಂಡಿರುವ ‘ವಿಶೇಷ ಸಾಂದ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪಗಳಿವೆ ಎಂಬ ಆರೋಪ ಕೇಳಿಬಂದಿದೆ. ಮೂವರು ಸದಸ್ಯರನ್ನೊಳಗೊಂಡ ಆಯುಕ್ತರ ಸಮಿತಿಯಲ್ಲಿ ತೀವ್ರ ಭಿನ್ನಾಭಿಪ್ರಾಯ ಮೂಡಿದೆ ಎಂದು ವರದಿಯಾಗಿದೆ. ಮತದಾರರ ಹೆಸರು ನೋಂದಣಿ, ರದ್ದುಗೊಳಿಸುವಿಕೆ ಹಾಗೂ ಮರುಸೇರ್ಪಡೆ ವಿಚಾರವಾಗಿ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಸಿಇಸಿ ನಿರ್ಧಾರಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ವಿವಾದಕ್ಕೆ ಕಾರಣವಾಗಿವೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆ ಹಾಗೂ ಮುಂಬರುವ ಚುನಾವಣೆಗಳನ್ನು ತಕ್ಷಣವೇ ತಡೆಹಿಡಿಯಬೇಕು ಚುನಾವಣಾ ಆಯೋಗದ ಆಯುಕ್ತರ ನೇಮಕಾತಿ ಮತ್ತು ಕಾರ್ಯನಿರ್ವಹಣಾ ವಿಧಾನದಲ್ಲಿ ಸಂಪೂರ್ಣ ಸುಧಾರಣೆ ತರಬೇಕು. ಹೊಸ ಮತದಾರರು ಹಾಗೂ ಯುವಕರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದ್ದು, ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.
ಇದನ್ನೂ ಓದಿ: ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಲೋಗೋ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಸಿಜೆಪಿ ಮಾಡಿರುವ ಎಲ್ಲಾ ಆರೋಪಗಳನ್ನು ಚುನಾವಣಾ ಆಯೋಗವು ಸಸಾರವಾಗಿ ತಳ್ಳಿಹಾಕಿದೆ. ಆಯೋಗದ ಒಳಗಡೆ ಯಾವುದೇ ರೀತಿಯ ಆಂತರಿಕ ಬಿರುಕು ಅಥವಾ ವೈಫಲ್ಯ ಉಂಟಾಗಿಲ್ಲ. ಯಾವುದೇ ಪ್ರಜಾಸತ್ತಾತ್ಮಕ ಹಾಗೂ ಸಾಂವಿಧಾನಿಕ ಸಂಸ್ಥೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಭಿನ್ನಾಭಿಪ್ರಾಯಗಳು ಮೂಡುವುದು ಸಹಜ ಪ್ರಕ್ರಿಯೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಭಿಜೀತ್ ದಿಪ್ಕೆ ಅವರು ದೇಶದ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ತಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದು, 48 ಗಂಟೆಗಳಲ್ಲಿ ರಾಜೀನಾಮೆ ಬಾರದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ.

