ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವು ಹಾಗೂ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ನಾಳೆ, ಅಂದರೆ ಜುಲೈ 18ರ ಶನಿವಾರದಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ತುರ್ತು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧಿಕೃತ ಪ್ರಕಟಣೆಯ ಪ್ರಕಾರ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ, ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಯಾವುದೇ ತರಗತಿ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಇದನ್ನೂ ಓದಿ: ಉಳ್ಳಾಲ ಕಡಲತೀರದಲ್ಲಿ ಪ್ರಕೃತಿ ವಿಸ್ಮಯ; ದಡಕ್ಕೆ ಬಂದು ಬಿದ್ದ ಲಕ್ಷಾಂತರ ಬೂತಾಯಿ ಮೀನುಗಳನ್ನು ತುಂಬಿಸಿಕೊಳ್ಳಲು ಮುಗಿಬಿದ್ದ ಜನ
ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತವು ಪ್ರಮುಖ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಕಡ್ಡಾಯವಾಗಿ ಜಾಗ್ರತೆ ವಹಿಸಬೇಕು.ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣಾ ಕಾರ್ಯವನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

