ಮೈಸೂರು: ಎರಡು ಬೈಕ್‌ಗಳು ಹಾಗೂ ಕೆಎಸ್‌ಆರ್‌ಟಿಸಿ (KSRTC) ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಶೋಚನೀಯ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಸಮೀಪದ ಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.
ಶುಕ್ರವಾರ ಹಂಪಾಪುರ ಮಾರ್ಗದ ಪುರ ಗ್ರಾಮದ ಬಳಿ ವೇಗವಾಗಿ ಬಂದ ಎರಡು ಬೈಕ್‌ಗಳು ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸವಾರರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮತ್ತಿಬ್ಬರು ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಓಡಿಬಂದು ರಕ್ಷಣೆಗೆ ಧಾವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕರ್ನಾಟಕ ಜಿಪಂ-ತಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್: 2027ರ ಜನವರಿಯಲ್ಲಿ ಎಲೆಕ್ಷನ್; ಮೀಸಲಾತಿ ಪಟ್ಟಿ ಪ್ರಕಟ
ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಎಚ್.ಡಿ.ಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

