ಬೆಂಗಳೂರು: ಕರ್ನಾಟಕ ರಾಜಕೀಯದ ಬಹುದಿನಗಳ ಸಿಎಂ ಕುರ್ಚಿಯ ಸಸ್ಪೆನ್ಸ್‌ಗೆ ಕೊನೆಗೂ ತೆರೆಬಿದ್ದಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ಮೇ 30) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಯ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ನಿಶ್ಚಿತವಾಗಿತ್ತಾದರೂ, ಇಂದು ಅಧಿಕೃತ ಪ್ರಕ್ರಿಯೆಯಂತೆ ಶಾಸಕರ ಸಭೆ ನಡೆಸಿ ನೂತನ ನಾಯಕನನ್ನು ಸರ್ವಸಮ್ಮತಿಯಿಂದ ಆರಿಸಲಾಗಿದೆ.
ಕಳೆದ ಮೂರು ವರ್ಷಗಳಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ಉಪಮುಖ್ಯಮಂತ್ರಿಯಾಗಿ (DCM) ಕಾರ್ಯನಿರ್ವಹಿಸಿದ್ದ ಡಿ.ಕೆ. ಶಿವಕುಮಾರ್, ಇಡೀ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿಭಾಯಿಸಿದ್ದರು. ಪಕ್ಷಕ್ಕಾಗಿ ಅವರು ನೀಡಿದ ನಿಸ್ವಾರ್ಥ ಕೊಡುಗೆ ಹಾಗೂ ತಂತ್ರಗಾರಿಕೆಯನ್ನು ಗುರುತಿಸಿರುವ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ಶಾಸಕರು, ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಒಮ್ಮತದಿಂದ ಅವರಿಗೆ ರಾಜ್ಯದ ಚುಕ್ಕಾಣಿ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಜೂನ್ 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ: ತೈಲ ಬೆಲೆ ಏರಿಕೆ ಹಿನ್ನೆಲೆ ಸರಳವಾಗಿ ಪ್ರಮಾಣ ವಚನ ಸ್ವೀಕಾರ
ಸಿಎಲ್‌ಪಿ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ತಕ್ಷಣವೇ ಡಿ.ಕೆ. ಶಿವಕುಮಾರ್ ಮತ್ತು ಪ್ರಮುಖ ಕಾಂಗ್ರೆಸ್ ಮುಖಂಡರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಅಜ್ಜಯ್ಯ ಪೀಠದ ನಿರ್ದೇಶನದಂತೆ ಜೂನ್ 3ರಂದು ಅತ್ಯಂತ ಸರಳವಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ಇಂದಿನ ಈ ಐತಿಹಾಸಿಕ ಆಯ್ಕೆಯಿಂದಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿಗಳಲ್ಲಿ ಭಾರಿ ಹರ್ಷೋದ್ಗಾರ ಹಾಗೂ ವಿಜಯೋತ್ಸವದ ವಾತಾವರಣ ಸೃಷ್ಟಿಯಾಗಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


