ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾರ್ಯಚಟುವಟಿಕೆಗಳು, ಪಥಸಂಚಲನ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇಂದು ಜರುಗಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಹೊಸ ವಿಧೇಯಕವೊಂದನ್ನು ಮಂಡಿಸಿ ಚರ್ಚೆ ನಡೆಸುವ ಸಾಧ್ಯತೆಯಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳು ನಡೆಸುವುದು ಎನ್ನಲಾದ ಕಾರ್ಯಕ್ರಮಗಳು, ಪಥಸಂಚಲನ ಹಾಗೂ ಸಾರ್ವಜನಿಕ ಸಮಾವೇಶಗಳ ಆಯೋಜನೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವುದು ಮತ್ತು ಅಗತ್ಯ ಬಿದ್ದರೆ ನಿರ್ಬಂಧಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ.
ಇದನ್ನೂ ಓದಿ: ಮಹಾಲಿಂಗೇಶ್ವರ ಸನ್ನಿಧಿಯಲ್ಲಿ 30 ಕೋಟಿ ರೂ. ಮೌಲ್ಯದ ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ಯೋಜನೆ; ಶಾಸಕ ಅಶೋಕ್ ರೈ
ಈ ಹಿಂದೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿ, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳ ಆಯೋಜನೆಗೆ ಕಾನೂನಾತ್ಮಕ ಸ್ಪಷ್ಟತೆ ಹಾಗೂ ನಿಯಂತ್ರಣ ತರಲು ಸರ್ಕಾರ ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ 2026’ ರೂಪಿಸಿದೆ.
ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕಾಯ್ದೆಯ ಕರಡು ಪ್ರತಿಯ ಕುರಿತು ಸುದೀರ್ಘ ಚರ್ಚೆ ನಡೆಯಲಿದ್ದು, ಸಂಪುಟದ ಒಪ್ಪಿಗೆ ಸಿಕ್ಕ ಬಳಿಕ ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲೇ ವಿಧೇಯಕವನ್ನು ಮಂಡಿಸುವ ಸಾಧ್ಯತೆಯಿದೆ.

