ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಶಾಸಕ ಸುಬ್ಬಾರೆಡ್ಡಿ ಅವರು ಚುನಾವಣಾ ನಾಮಪತ್ರ ಸಲ್ಲಿಸುವಾಗ ತಮ್ಮ ನೈಜ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆ ಮತ್ತು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಮುನಿರಾಜು ಆರೋಪಿಸಿದ್ದರು. ಅಲ್ಲದೆ, ಆಸ್ತಿ ತೆರಿಗೆ ಪಾವತಿಯ ಬಾಕಿ ಮಾಹಿತಿಯನ್ನು ಸರಿಯಾಗಿ ಉಲ್ಲೇಖಿಸಿಲ್ಲ ಎಂಬುದು ಪ್ರಮುಖ ದೂರು ಆಗಿತ್ತು.ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಜೆ. ಅಕ್ಕಿಯವರ ಪೀಠವು, ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷಗಳಿವೆ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ: ರಾಜ್ಯ ಸರ್ಕಾರದಿಂದ ಕೇಂದ್ರದ ಅನುದಾನ ದುರ್ಬಳಕೆ: ವಿಜಯೇಂದ್ರ ಗಂಭೀರ ಆರೋಪ
ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಈ ತೀರ್ಪಿನಿಂದಾಗಿ ಸುಬ್ಬಾರೆಡ್ಡಿ ಅವರು ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಆದಾಗ್ಯೂ, ಅವರು ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಹೊಂದಿದ್ದಾರೆ. ಕಾನೂನು ಹೋರಾಟ ನಡೆಸಿದ ಬಿಜೆಪಿಯ ಮುನಿರಾಜು ಅವರಿಗೆ ಇದು ದೊಡ್ಡ ಜಯವಾಗಿದೆ. ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

