ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಯೋಜನೆ ಜನರಿಗೆ ಉತ್ತಮ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ಒದಗಿಸಲು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇತ್ತೀಚಿನ ಬಜೆಟ್‌ನಲ್ಲಿ ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ ಎಂದು ಅವರು ಉಲ್ಲೇಖಿಸಿದರು.

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯು ದಶಕಗಳಿಂದ ಜಿಲ್ಲೆಯ ಜನರ ಬಹುಕಾಲದ ಕನಸಾಗಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರವು ಮತ್ತಷ್ಟು ಬಲಪಡಿಸುವುದರ ಜೊತೆಗೆ ಜನರಿಗೆ ಸಮೀಪದಲ್ಲೇ ಉತ್ತಮ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು. ಇದರಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಉತ್ತಮ ಅವಕಾಶಗಳೂ ದೊರೆಯಲಿವೆ ಎಂದರು.
ಇದನ್ನೂ ಓದಿ: ಉಡುಪಿ: ಪಾತ್ರೆಯೊಳಗೆ ಮುಖ ಸಿಲುಕಿ ಅಲೆದಾಡುತ್ತಿದ್ದ ಕೋತಿ; ಯುವಕರಿಂದ ಆಪರೇಷನ್ ರೆಸ್ಕ್ಯೂ
ಈಗಾಗಲೇ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರದ ಜಾಗವನ್ನು ಗುರುತಿಸಲಾಗಿದ್ದು, ಒಟ್ಟು 30.80 ಏಕರೆ ಜಾಗವನ್ನು ಮೀಸಲಿರಿಸಲಾಗಿದೆ. ಅಗತ್ಯ ಮೂಲಸೌಕರ್ಯಗಳೊಂದಿಗೆ ಮೆಡಿಕಲ್ ಕಾಲೇಜು ನಿರ್ಮಿಸಲು ಈ ಸ್ಥಳವು ಅತ್ಯಂತ ಸೂಕ್ತವಾಗಿದೆ ಎಂದು ಯಶ್ಪಾಲ್ ಸುವರ್ಣ ಮಾಹಿತಿ ನೀಡಿದರು.
ಆದ್ದರಿಂದ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿ, ಶೀಘ್ರವೇ ಆಡಳಿತಾತ್ಮಕ ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಸರ್ಕಾರದ ಬದ್ಧತೆ ಇರುವುದಾಗಿ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತ ಪ್ರಸ್ತಾವನೆಯನ್ನು ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

