ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ (Yellow Alert) ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆ?
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮುಂಬರುವ 4 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್
ಬೆಂಗಳೂರಿನ ಹವಾಮಾನ :
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಸಂಪೂರ್ಣವಾಗಿ ಮೋಡಕವಿದ ವಾತಾವರಣ ಇರಲಿದ್ದು, ನಗರದ ವಿವಿಧೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 29°C ಹಾಗೂ ಕನಿಷ್ಠ ತಾಪಮಾನ 20°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

