ಮಂಗಳೂರು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದಿಂದ ರಾಜ್ಯದ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬಡವರ ವಸತಿ ಯೋಜನೆಗಳಿಗೆ ಅನುದಾನ ನೀಡದೆ, ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಪಿಂಚಣಿ ಸೌಲಭ್ಯಗಳಿಗೆ ಕತ್ತರಿ ಹಾಕಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರು ಮಹಾಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಬೀರಿ ಜಂಕ್ಷನ್ನಿಂದ ಕೋಟೆಕಾರುವರೆಗೆ ಹಮ್ಮಿಕೊಂಡಿದ್ದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ – ನಮ್ಮ ಹಕ್ಕು ನಮಗೆ ನೀಡಿ’ ಬೃಹತ್ ಪಾದಯಾತ್ರೆ ಹಾಗೂ ಹಕ್ಕೊತ್ತಾಯ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಸಮರ್ಪಕ ಅನುದಾನ ಬಿಡುಗಡೆಯಾಗುತ್ತಿಲ್ಲ. ಇದರಿಂದ ಬಡವರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಯುವಜನತೆ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
96ಕ್ಕೂ ಹೆಚ್ಚು ಪಂಚಾಯಿತಿಗಳಿಗೆ ಭೇಟಿ: ಬಡವರಿಗೆ ಮನೆ ನೀಡುವಲ್ಲಿ ಸರ್ಕಾರ ವಿಫಲ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 96ಕ್ಕೂ ಹೆಚ್ಚು ಪಂಚಾಯಿತಿಗಳಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನ ದೊರೆಯುತ್ತಿಲ್ಲ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆವಾಸ್ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆಯಡಿ ಪಂಚಾಯಿತಿಗಳಿಗೆ ನೂರಾರು ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ಈಗಿನ ಸರ್ಕಾರದ ಅವಧಿಯಲ್ಲಿ ಬಡವರಿಗೆ ಮನೆ ಮಂಜೂರು ಮಾಡುವ ಪ್ರಕ್ರಿಯೆ ಕುಂಠಿತಗೊಂಡಿದೆ ಎಂದು ಟೀಕಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಎಲ್ಬಿಪಿಎಎಸ್ (LBPAS) ತಂತ್ರಾಂಶದ ಲೋಪಗಳಿಂದಾಗಿ ಸಾಮಾನ್ಯ ನಾಗರಿಕರು ಹಾಗೂ ಕಟ್ಟಡ ನಿರ್ಮಾಣಕಾರರು ತಮ್ಮ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಲು ಕಟ್ಟಡ ಪರವಾನಗಿ ಪಡೆಯುವುದಕ್ಕೂ ತಿಂಗಳುಗಟ್ಟಲೆ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಪೌರಕಾರ್ಮಿಕರ ವೇತನ ವಿಚಾರದಲ್ಲೂ ಸರ್ಕಾರದ ವಿರುದ್ಧ ಆಕ್ರೋಶ
ಬೆಳಗಿನ ಜಾವದಿಂದಲೇ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರ ವೇತನ ವಿಚಾರದಲ್ಲೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದರು.
ಕಾರ್ಮಿಕ ಇಲಾಖೆಯು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದರೂ, ಹಣಕಾಸು ಇಲಾಖೆಯ ಮೂಲಕ ಅದಕ್ಕೆ ತಡೆ ನೀಡಲಾಗಿತ್ತು. ಈ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದರು.
ಇದಲ್ಲದೆ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳ ವಿತರಣೆಯಲ್ಲಿನ ವಿಳಂಬದಿಂದ ಬಡವರು ತೊಂದರೆ ಅನುಭವಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವೇಕ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ನೂರಾರು ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಆದರೆ ಇಂದು ಸರ್ಕಾರಿ ಶಾಲೆಗಳು ಹಾಗೂ ಪಂಚಾಯಿತಿ ಕಟ್ಟಡಗಳ ನಿರ್ವಹಣೆಯೇ ಸವಾಲಾಗಿದೆ ಎಂದು ಟೀಕಿಸಿದರು.
2.88 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಯುವಜನತೆಗೆ ಉದ್ಯೋಗ ವಂಚನೆ ಆರೋಪ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ಮಾಸಾಶನದ ಮೂಲಕ ನೆರವು ನೀಡಲಾಗುತ್ತಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ಅಂಗವಿಕಲರ ಪಿಂಚಣಿ ಸ್ಥಗಿತಗೊಳ್ಳುತ್ತಿರುವ ದೂರುಗಳು ಕೇಳಿಬರುತ್ತಿವೆ ಎಂದು ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದರು.
ವಿಧಾನ ಪರಿಷತ್ತಿನಲ್ಲಿ ತಾವು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದ ಪ್ರಕಾರ, ರಾಜ್ಯದ 42 ಇಲಾಖೆಗಳಲ್ಲಿ ಒಟ್ಟು 2,88,481 ಸರ್ಕಾರಿ ಹುದ್ದೆಗಳು ಖಾಲಿ ಇವೆ. ಈ ಪೈಕಿ ಸುಮಾರು 76 ಸಾವಿರ ಶಿಕ್ಷಕರ ಹುದ್ದೆಗಳು ಹಾಗೂ 1,000ಕ್ಕೂ ಹೆಚ್ಚು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು ಖಾಲಿ ಉಳಿದಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಗ್ಯಾರಂಟಿ ಹೆಸರಿನಲ್ಲಿ ಜನರ ಜೇಬಿಗೆ ಕತ್ತರಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ವಾಗ್ದಾಳಿ
2024ರಲ್ಲಿ 250 ಪಿಡಿಒ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಮೂಲಕ ಅರ್ಜಿ ಆಹ್ವಾನಿಸಿದ್ದರೂ ಈವರೆಗೆ ಫಲಿತಾಂಶ ಪ್ರಕಟಿಸದಿರುವುದು ಉದ್ಯೋಗಾಕಾಂಕ್ಷಿಗಳಿಗೆ ಮಾಡಿದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳೇ ಅಭಿವೃದ್ಧಿಗೆ ಆಸರೆ
ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಹಲವು ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ, ಸ್ವಚ್ಛ ಭಾರತ್ ಮಿಷನ್, ಅಮೃತ್ ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಗಳ ಅನುದಾನವೇ ಪ್ರಮುಖ ಆಧಾರವಾಗಿದೆ ಎಂದು ಹೇಳಿದರು.
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆಯ ಸೌಲಭ್ಯ ಒದಗಿಸುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ವಯ ವಂದನಾ ಸೌಲಭ್ಯವನ್ನೂ ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಜನವಿರೋಧಿ ಹಾಗೂ ಭ್ರಷ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಹಕ್ಕೊತ್ತಾಯ ಹೋರಾಟ ಮುಂದುವರಿಯಲಿದೆ. ಜನರ ಹಕ್ಕುಗಳು ಮತ್ತು ಸೌಲಭ್ಯಗಳು ಸಮರ್ಪಕವಾಗಿ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ್ ತೊಕ್ಕೊಟ್ಟು, ಕೆ. ಮೋಹನ್ ರಾಜ್, ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

