ಉಡುಪಿ: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ಹ್ಯಾಂಡ್‌ಸೆಟ್‌ಗಳು ಹಾಗೂ ಹಾರ್ಡ್‌ವೇರ್ ವಸ್ತುಗಳು ಬೆಂಕಿಯ ಕೆನ್ನಾಲಗೆಗೆ ಆಹುತಿಯಾಗಿವೆ.

ಪ್ರಾಥಮಿಕ ಅಂದಾಜಿನ ಪ್ರಕಾರ, ಈ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ಕರಾವಳಿಯಲ್ಲಿ ಹೀಟ್‌ವೇವ್ ಜೊತೆಗೆ ಮಳೆ ಮುನ್ಸೂನೆ: ಮಂಗಳೂರು-ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಣೆ

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದರು. ಜನನಿಬಿಡ ಪ್ರದೇಶವಾದ್ದರಿಂದ ಬೆಂಕಿ ನಂದಿಸುವ ಕಾರ್ಯ ಸವಾಲಾಗಿತ್ತು. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

