ದೆಹಲಿ: ಲಕ್ಷಾಂತರ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳ ಭವಿಷ್ಯದ ಮೇಲೆ ಕಾರ್ಮೋಡ ಕವಿದಿದ್ದು, ಮೇ 3ರಂದು ನಡೆದಿದ್ದ ನೀಟ್ ಯುಜಿ (NEET-UG) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇಡೀ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಲಾಗಿದೆ.
ರಾಜಸ್ಥಾನದ ಸೀಕರ್‌ನಲ್ಲಿ ಕೈಬರಹದಲ್ಲಿದ್ದ ಸುಮಾರು 140 ಪ್ರಶ್ನೆಗಳಿದ್ದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮೊದಲೇ ಸೋರಿಕೆಯಾಗಿತ್ತು. ಈ ಬಗ್ಗೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಗುಂಪು (SOG) ನೀಡಿದ ವರದಿಯು ಅಕ್ರಮವನ್ನು ಪುಷ್ಟೀಕರಿಸಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರವು ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ. ಪರೀಕ್ಷೆಗೂ ಮೊದಲೇ ‘ಗೆಸ್ ಪೇಪರ್’ ಹೆಸರಲ್ಲಿ ಪ್ರಶ್ನೆ ಪತ್ರಿಕೆ ಹಂಚಿಕೆಯಾಗಿದ್ದರ ಹಿಂದೆ ಇರುವ ದೊಡ್ಡ ಜಾಲವನ್ನು ಪತ್ತೆ ಹಚ್ಚುವುದು ತನಿಖೆಯ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ:BJP: 25 ಲಕ್ಷಕ್ಕೆ ವೈದ್ಯಕೀಯ ಸೀಟ್ ಮಾರಾಟ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇಶದ ವಿವಿಧೆಡೆ 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಎನ್‌ಟಿಎ (NTA) ಸಂಸ್ಥೆಯು ತನಿಖೆಗೆ ತನ್ನ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದೆ. ಪರೀಕ್ಷೆ ರದ್ದಾಗಿರುವುದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದ್ದು, ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


