ಉಡುಪಿ: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉಡುಪಿಯ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದ ತನಿಖೆ ಮತ್ತು ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ (SP) ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಪ್ರಕರಣದ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಆಧರಿಸಿ, ಮುಂದಿನ ಶಿಸ್ತು ಕ್ರಮಕ್ಕಾಗಿ ವರದಿಯನ್ನು ಮಂಗಳೂರಿನ ಪಶ್ಚಿಮ ವಲಯ ಡಿಐಜಿ ಅವರಿಗೆ ಸಲ್ಲಿಸಲಾಗಿತ್ತು. ಈ ವರದಿಯ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು (PSI) ಪಶ್ಚಿಮ ವಲಯ ಡಿಐಜಿ ಕಚೇರಿಗೆ ಅಟ್ಯಾಚ್ (ಸಂಯೋಜನೆ) ಮಾಡಲಾಗಿದ್ದು, ಅವರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: ಪ್ರದೀಪ್ ಪೂಜಾರಿ ಬಡವನೆಂಬ ಕಾರಣಕ್ಕೆ ಅನ್ಯಾಯ: ಕಿಶೋರ್ ಕುಮಾರ್ ಪುತ್ತೂರು
ಆಸ್ಪತ್ರೆ ಭದ್ರತೆಯಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು:
ಇದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಬೆಳವಣಿಗೆಯಲ್ಲಿ, ಆಸ್ಪತ್ರೆಯಲ್ಲಿ ಗಾರ್ಡ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿದ ತನಿಖಾ ವರದಿಯ ಆಧಾರದ ಮೇಲೆ ಈ ಅಮಾನತು ಆದೇಶ ಹೊರಡಿಸಲಾಗಿದ್ದು, ಅಮಾನತುಗೊಂಡಿರುವ ಇಬ್ಬರೂ ಸಿಬ್ಬಂದಿಗಳ ವಿರುದ್ಧವೂ ಶೀಘ್ರದಲ್ಲೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


