ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ರೈಲ್ವೇ ಸಂಪರ್ಕವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರವಿವಾರ ಬೆಂಗಳೂರು ಮತ್ತು ಮುಂಬೈ ನಡುವೆ ಸಂಚರಿಸಲಿರುವ ಹೊಸ ‘SMVT ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್’ ರೈಲಿಗೆ ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಮೂಲಕ ಹಸಿರು ನಿಶಾನೆ ತೋರಿಸಿದ್ದಾರೆ. ಇದೇ ವೇಳೆ ಎರಡು ಪ್ರಮುಖ ನಗರಗಳ ಭಕ್ತರು ಮತ್ತು ಪ್ರಯಾಣಿಕರು ಬಹುದಿನಗಳಿಂದ ಕಾಯುತ್ತಿದ್ದ ‘ವಂದೇ ಭಾರತ್ ಸ್ಲೀಪರ್’ (Vande Bharat Sleeper) ರೈಲು ಸೇವೆ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಈ ವರ್ಚುವಲ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, “ಹೊಸ ರೈಲು ಸೇವೆಯು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ವಾಣಿಜ್ಯ ಹಾಗೂ ಸಾಂಸ್ಕೃತಿಕ ಬಾಂಧವ್ಯವನ್ನು ವೃದ್ಧಿಸಲಿದೆ. ಇದು ದಕ್ಷಿಣ ಮತ್ತು ಉತ್ತರ ಕರ್ನಾಟಕದ ಭಾಗದ ಜನರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ,” ಎಂದರು. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹಣಕಾಸು ನೆರವು ನೀಡಲಾಗಿದ್ದು, ಇದರಿಂದಾಗಿ ರಾಜ್ಯದ ಪ್ರಮುಖ ಯೋಜನೆಗಳು ವೇಗವಾಗಿ ಜಾರಿಯಾಗುತ್ತಿವೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿ ರೂ. ಅನುದಾನ: 5 ಪ್ರಮುಖ ಸೇತುವೆ ಕಾಮಗಾರಿಗಳಿಗೆ ಚಾಲನೆ!
ಅಮೃತ್ ಭಾರತ್ ಯೋಜನೆ: ರೈಲು ನಿಲ್ದಾಣಗಳ ಜೀರ್ಣೋದ್ಧಾರ:
ರಾಜ್ಯದ ರೈಲ್ವೇ ನಿಲ್ದಾಣಗಳ ಆಧುನೀಕರಣದ ಕುರಿತು ಮಾಹಿತಿ ನೀಡಿದ ಸಚಿವರು, “ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ (Amrit Bharat Station Scheme) ಕರ್ನಾಟಕದ ಒಟ್ಟು 61 ರೈಲ್ವೇ ನಿಲ್ದಾಣಗಳನ್ನು 2,160 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಇದರಲ್ಲಿ ಈಗಾಗಲೇ 9 ನಿಲ್ದಾಣಗಳ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮರುರೂಪ ಪಡೆಯುತ್ತಿರುವ ನಿಲ್ದಾಣಗಳಲ್ಲಿ ಬೆಂಗಳೂರು ಕಂಟೋನ್ಮೆಂಟ್ ರೈಲ್ವೇ ನಿಲ್ದಾಣವನ್ನು 485 ಕೋಟಿ ರುಪಾಯಿ ವೆಚ್ಚದಲ್ಲಿ ಹಾಗೂ ಯಶವಂತಪುರ ಜಂಕ್ಷನ್ ರೈಲ್ವೇ ನಿಲ್ದಾಣವನ್ನು 367 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಪ್‌ಗ್ರೇಡ್ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


