ಸುಳ್ಯ: ರಸ್ತೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯದಿಂದ 15 ದಿನಗಳ ‘ಸಮುದಾಯ ಸೇವೆ’ ಶಿಕ್ಷೆ ವಿಧಿಸಲ್ಪಟ್ಟಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುಳ್ಯ ನಿವಾಸಿ ರಕ್ಷಿತ್ ಜಿ. (29) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸುಳ್ಯದ ಜೆಎಂಎಫ್‌ಸಿ ನ್ಯಾಯಾಲಯವು ರಕ್ಷಿತ್‌ಗೆ 15 ದಿನಗಳ ಕಾಲ ಸುಳ್ಯ ಪೇಟೆಯಲ್ಲಿ ನಿಂತು ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿತ್ತು. ಅದರಂತೆ ಮಾರ್ಚ್ 15ರಂದು ರಕ್ಷಿತ್ ಸುಳ್ಯ ಪೇಟೆಯ ಜಂಕ್ಷನ್‌ನಲ್ಲಿ ಬೋರ್ಡ್ ಹಿಡಿದು ನಿಂತು ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಸುಳ್ಯ: ನಿಯಮ ಉಲ್ಲಂಘಿಸಿದ ಯುವಕನಿಗೆ ಟ್ರಾಫಿಕ್ ರೂಲ್ಸ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ಕೋರ್ಟ್
ಈ ವೇಳೆ ರಕ್ಷಿತ್ ರಸ್ತೆಯಲ್ಲಿ ನಿಂತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ವೈರಲ್ ಆಗಿದ್ದವು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅದರಿಂದ ಮಾನಸಿಕವಾಗಿ ಬೇಸರಗೊಂಡಿದ್ದ ರಕ್ಷಿತ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ. ಘಟನೆ ಗಮನಿಸಿದ ಕುಟುಂಬಸ್ಥರು ತಕ್ಷಣ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

