ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹೆಸರನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು (ಫೆಬ್ರವರಿ 17, 2026) ವಜಾ ಮಾಡಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಸೂರಜ್ ರೇವಣ್ಣ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಎಸ್‌ಐಟಿ (SIT) ಈ ಹಿಂದೆ ಸಲ್ಲಿಸಿದ್ದ ‘ಬಿ’ ರಿಪೋರ್ಟ್ (ಆರೋಪ ಮುಕ್ತ ವರದಿ) ಅನ್ನು ಕೆಳ ನ್ಯಾಯಾಲಯ ಈಗಾಗಲೇ ತಿರಸ್ಕರಿಸಿದ್ದು, ಮರು ತನಿಖೆಗೆ ಸೂಚಿಸಿದೆ. ಇದರ ಬೆನ್ನಲ್ಲೇ ಈ ಅರ್ಜಿ ವಜಾ ಆಗಿರುವುದು ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ತಂದೊಡ್ಡಿದೆ. 2024ರ ಜೂನ್ 22ರಂದು ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನೂ ಓದಿ: ಕನ್ನಡ ನಟಿಗೆ ಬ್ಲ್ಯಾಕ್‌ಮೇಲ್: ವಾಶ್‌ರೂಂನಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಕಿಡಿಗೇಡಿ
ದೂರಿನ ಆಧಾರದ ಮೇಲೆ ಜೂನ್ 23ರಂದು ಸೂರಜ್ ಅವರನ್ನು ಬಂಧಿಸಲಾಗಿತ್ತು. ಸುಮಾರು ಒಂದು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇವರು, ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೇ ವೇಳೆ ಸೂರಜ್ ಆಪ್ತರು, “ದೂರುದಾರನು 5 ಕೋಟಿ ರೂ. ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ” ಎಂದು ಪ್ರತಿ ದೂರು ಕೂಡ ದಾಖಲಿಸಿದ್ದರು. ನ್ಯಾಯಾಲಯವು ಅರ್ಜಿಯನ್ನು ವಜಾ ಮಾಡಿರುವುದರಿಂದ, ಸೂರಜ್ ರೇವಣ್ಣ ಈ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ತನಿಖಾ ಸಂಸ್ಥೆಗಳು ಮರು ತನಿಖೆಯನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

