ಮಂಗಳೂರು: ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಭಾರತಕ್ಕೆ ಅಕ್ರಮವಾಗಿ ನುಸುಳಿ ಮಂಗಳೂರಿನಲ್ಲಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು (Panambur Police) ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬಾಂಗ್ಲಾದೇಶದ ಸತ್ಖಿರಾ ಜಿಲ್ಲೆಯ ಅಶಿಕುಲ್ ಇಸ್ಲಾಂ (33) ಮತ್ತು ಢಾಕಾ ನಗರದ ಎಂಡಿ ಅಮೀನ್ (47) ವಶಕ್ಕೆ ಪಡೆಯಲಾದ ಅಕ್ರಮ ವಲಸಿಗರಾಗಿದ್ದಾರೆ. ಪಣಂಬೂರು ಬೀಚ್ ಹತ್ತಿರದ ರೆಸ್ಟೋರೆಂಟ್ನಲ್ಲಿ ಬಾಂಗ್ಲಾದೇಶದ ಪ್ರಜೆಗಳು ಕೆಲಸ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಇನ್ಸ್ಪೆಕ್ಟರ್ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸದರಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಇಬ್ಬರೂ ಯಾವುದೇ ಪಾಸ್ಪೋರ್ಟ್, ವೀಸಾ ಅಥವಾ ಅಧಿಕೃತ ಅನುಮತಿ ಪತ್ರಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಕರುನಾಡಿನ ರೈಲ್ವೆ ಕ್ರಾಂತಿಗೆ ಪ್ರಧಾನಿ ಮೋದಿ ಚಾಲನೆ!: ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್
ವಶಕ್ಕೆ ಪಡೆಯಲಾದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಸದ್ಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ (Detention Centre) ಇರಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ಮುಂದೆ ಹಾಜರುಪಡಿಸಿ, ಬಳಿಕ ಸ್ವದೇಶವಾದ ಬಾಂಗ್ಲಾದೇಶಕ್ಕೆ ಗಡಿಪಾರು (Deportation) ಮಾಡಲು ಪೊಲೀಸರು ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಪಾಲ್ಗೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


