ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಭದ್ರಗಿರಿ (ಭದ್ರಾವತಿ) ಜಂಕ್ಷನ್ ಬಳಿ ನಡುರಾತ್ರಿ ಭೀಕರ ರಕ್ತಪಾತ ಸಂಭವಿಸಿದೆ. ಪ್ರಮುಖ ರೌಡಿ ಶೀಟರ್ ಸುಜಿತ್ ಪಿಂಟೋ (43) ಎಂಬಾತನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದೆ.
ಹಲವು ಕೊಲೆ ಪ್ರಕರಣ ಸೇರಿದಂತೆ ತೀವ್ರ ಸ್ವರೂಪದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಸುಜಿತ್ ಪಿಂಟೋ, ಮಂಗಳವಾರ ತಡರಾತ್ರಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿಯ ಭದ್ರಗಿರಿ ಜಂಕ್ಷನ್ ಬಳಿ ಬಂದಿದ್ದನು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿಗಳ ತಂಡ ಮಾರಕಾಸ್ತ್ರಗಳು ಹಾಗೂ ಕಬ್ಬಿಣದ ರಾಡ್ನಿಂದ ಸುಜಿತ್ ಪಿಂಟೋ ಮೇಲೆ ದಾಳಿ ನಡೆಸಿದೆ. ತೀವ್ರ ರಕ್ತಸ್ರಾವದಿಂದ ಸುಜಿತ್ ಪಿಂಟೋ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ನಟಿ ರುಕ್ಮಿಣಿ ವಸಂತ್ ಎಐ ಅಶ್ಲೀಲ ವಿಡಿಯೋ ಕೇಸ್: ಮೂವರು ಕಿಡಿಗೇಡಿಗಳನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಹಾಗೂ ಬ್ರಹ್ಮಾವರ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ಹಳೆಯ ದ್ವೇಷ ಹಾಗೂ ಹಣಕಾಸಿನ ವೈಷಮ್ಯವೇ ಕಾರಣವೇ ಎಂಬ ಕೋನದಲ್ಲಿ ತನಿಖೆ ಮುಂದುವರಿದಿದೆ. ಕೃತ್ಯ ಎಸಗಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಬಲೆ ಬೀಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

