ಉತ್ತರಾಖಂಡ್‌ನಲ್ಲಿ ಭೀಕರ ಬಸ್ ದುರಂತ: ಸೇತುವೆಯಿಂದ ಕಂದಕಕ್ಕೆ ಉರುಳಿಬಿದ್ದ ಬಸ್ ; 8 ಪ್ರಯಾಣಿಕರು ದುರ್ಮರಣ

ಡೆಹ್ರಾಡೂನ್: ಉತ್ತರಾಖಂಡ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿಬಿದ್ದ ಪರಿಣಾಮ 8 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ಉತ್ತರಾಖಂಡ್‌ನ ಟೆಹ್ರಿ ಗರ್ವಾಲ್ ಜಿಲ್ಲೆಯ ಗುಲಾರ್ (Gular) ಎಂಬಲ್ಲಿರುವ ರಿಷಿಕೇಶ-ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಬಳಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ. ಹರಿದ್ವಾರದಿಂದ ಚಮೋಲಿ ಜಿಲ್ಲೆಯ ಕರ್ಣಪ್ರಯಾಗಕ್ಕೆ ತೆರಳುತ್ತಿದ್ದ ಈ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತಕ್ಕೀಡಾದ ಬಸ್‌ನಲ್ಲಿ ಸುಮಾರು 30 ರಿಂದ 35 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ದುರಂತದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, 8 ಮಂದಿ ಸ್ಥಳದಲ್ಲೇ ಅಥವಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

Advertisement

ಇದನ್ನೂ ಓದಿ: ಕಡಬ ಬಳಿ ಭೀಕರ ರಸ್ತೆ ಅಪಘಾತ: ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಮತ್ತೊಬ್ಬರು ಗಂಭೀರ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಬಸ್‌ನ ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು, ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನಿಖರ ಕಾರಣ ಏನೆಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement